ವಿದ್ಯುತ್‌ ಉತ್ಪಾದನೆ ಸಾಮರ್ಥ್ಯಕ್ಕಿಂತ ಕಡಿಮೆಯಾಗಿದ್ದು ಏಕೆ? : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ರಾಜ್ಯದ ವಿದ್ಯುತ್‌ ಉತ್ಪಾದನೆಯು ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತವಾಗಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಿಮಾಯ್ಯ ಅವರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು, ಶುಕ್ರವಾರ ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ವೇಳೆ 32,009 ಮೆಗಾ ವ್ಯಾಟ್‌ ಉತ್ಪಾದನೆ ಸಾಮರ್ಥ್ಯ ಇದ್ದರೂ ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಯಾಕೆ ಹೆಚ್ಚಳವಾಗಿಲ್ಲ ಎಂಬುದರ ಬಗ್ಗೆ ಅಧಿಕಾರಿಗಳಿಂದ ವಿವರಣೆ ಕೇಳಿದರು.
ನಮ್ಮ ಕಾಂಗ್ರೆಸ್‌ ಸರ್ಕಾರದಲ್ಲಿ ಎಲ್ಲ ಸಮಸ್ಯೆಗಳ ನಡುವೆಯೇ ವಿದ್ಯುತ್ ಉತ್ಪಾದನೆ ದುಪ್ಪಟ್ಟಾಗಿತ್ತು. ನಾವು ಅಧಿಕಾರಕ್ಕೆ ಬಂದ 2013 -14ರಲ್ಲಿ 14,048 ಮೆಗಾವ್ಯಾಟ್‌ ಉತ್ಪಾದನೆ ಆಗುತ್ತಿತ್ತು. 2017-18ರ ವೇಳೆಗೆ 27,780 ಮೆಗಾವ್ಯಾಟ್‌ಗೆ ಉತ್ಪಾದನೆ ಏರಿಕೆಯಾಗಿತ್ತು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆಯಾಗಿರುವ ಕಲ್ಲಿದ್ದಲಿನ ಗುಣಮಟ್ಟ ಉತ್ತಮವಾಗಿಲ್ಲ. ಇದು ವಿದ್ಯುತ್‌ ಉತ್ಪಾದನೆ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಕೇಂದ್ರದ ಗಮನಕ್ಕೆ ತರಲಾಗಿದೆ. ಹಾಗೂ ಪ್ರತಿದಿನ ಎರಡು ರೇಕುಗಳಷ್ಟು ಹೆಚ್ಚುವರಿ ಕಲ್ಲಿದ್ದಲು ಹಂಚಿಕೆಗೆ ಕೋರಿದ್ದೇವೆ. ಅಲ್ಲದೆ, ಕಲ್ಲಿದ್ದಲು ಆಮದಿಗೆ ಟೆಂಡರ್‌ ಕರೆಯಲಾಗಿದೆ ಎಂದು ತಿಳಿಸಿದರು.
ರಾಜ್ಯದ ಸ್ಥಾಪಿತ ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್‌ ಉತ್ಪಾದನೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಸಿದ್ದರಾಮಯ್ಯ, ಉಷ್ಣವಿದ್ಯುತ್‌ ಸ್ಥಾವರಗಳಲ್ಲಿ ತೇವಗೊಂಡ ಕಲ್ಲಿದ್ದಲು ಬಳಕೆ ಮಾಡದಂತೆ ಸೂಚನೆ ನೀಡಿದರು.
ಗೃಹ ಜ್ಯೋತಿ ಯೋಜನೆಯಡಿ ಆಗಸ್ಟ್‌ ತಿಂಗಳಲ್ಲಿ 1.26 ಕೋಟಿ ಗ್ರಾಹಕರಿಗೆ ಹಾಗೂ ಸೆಪ್ಟೆಂಬರ್‌ ತಿಂಗಳಲ್ಲಿ 1.35 ಕೋಟಿ ಗ್ರಾಹಕರಿಗೆ ಶೂನ್ಯ ಮೊತ್ತದ ವಿದ್ಯುತ್‌ ಬಿಲ್‌ ನೀಡಲಾಗಿದೆ. ಇದಕ್ಕಾಗಿ 1400 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಮಾಃಇತಿ ನೀಡಲಾಯಿತು.
ಎಸ್ಕಾಂಗಳ ಆರ್ಥಿಕ ಸ್ಥಿತಿಗತಿಗಳ ಬಗ್ಗೆಯೂ ಚರ್ಚೆ ನಡೆಯಿತು. ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ ಗೋಯಲ್‌, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಇದ್ದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement