ಬೆಂಗಳೂರು: ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಮಾಸಾಶನವನ್ನು (monthly pension) ಮುಂದಿನ ಬಜೆಟ್‌ನಲ್ಲಿ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಎಷ್ಟು ಹೆಚ್ಚಳ ಮಾಡಲಾಗುತ್ತದೆ ಎಂದು ಈಗಲೇ ಹೇಳುವುದಿಲ್ಲ. ಆದರೆ ಈಗ ಇರುವುದಕ್ಕಿಂತ ಹೆಚ್ಚಳ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಹಿರಿಯ ನಾಗರಿಕರ ವೃದ್ಧಾಪ್ಯ ವೇತನ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ. ಹಾಗೂ ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು ಮಾತನಾಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ , ಹಿರಿಯ ನಾಗರಿಕರಿಗೆ ನೀಡುವ ವೃದ್ಧಾಪ್ಯ ವೇತನವನ್ನು 2 ಸಾವಿರ ರೂಪಾಯಿಗೆ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.
ನಮಗೆ ವೃದ್ಧಾಪ್ಯ ವೇತನ ಹೆಚ್ಚಳ ಮಾಡಿ ಎಂದು ಸಾಕಷ್ಟು ಹಿರಿಯ ನಾಗರಿಕರು ಮನವಿ ಮಾಡುತ್ತಿದ್ದಾರೆ. ಈಗ ಈ ಕಾರ್ಯಕ್ರಮದ ಮೂಲಕ ನಿಮ್ಮ ಗಮನಕ್ಕೆ ತರಬಯಸುತ್ತಿದ್ದೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿರಿಯ ನಾಗರಿಕರ ಪಿಂಚಣಿಯನ್ನು ಹೆಚ್ಚಳ ಮಾಡುವ ಭರವಸೆ ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ