ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಮುಕ್ತಗೊಳಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ನಡೆದ ಜೆಡಿಎಸ್ ಕಾರ್ಯಕಾರಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು, ಹಿಂದಿನ ಅಧ್ಯಕ್ಷರ ಹೇಳಿಕೆ ಬಗ್ಗೆ ನಾನು ಪ್ರಸ್ತಾಪ ಮಾಡುವುದಿಲ್ಲ. ಹಾಗೂ ಅವಶ್ಯಕತೆಯೂ ಇಲ್ಲ, ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಲಾಗಿದೆ. ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಅವರನ್ನು ಅಧ್ಯಕ್ಷ ಸ್ಥಾನದಿಂದ ತೆರವು ಮಾಡಿದ್ದೇವೆ. ಈ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಹಾಗೂ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಹಾಗೂ ಇತರ ಮುಖಂಡರ ಜತೆಗೆ ಸಮಾಲೋಚನೆ ಮಾಡಿದ್ದೇವೆ ಎಂದರು.
ಪಕ್ಷದ ವಿವಿಧ ರಾಜ್ಯಗಳ ಘಟಕಗಳಿಗೆ ಮಾಹಿತಿ ನೀಡಲಾಗಿದೆ. ಅವರಿಗೆ ನಮ್ಮ ನಡೆಯ ಬಗ್ಗೆ ಮನವರಿಕೆ ಮಾಡಿದ್ದೇವೆ. ಜೆಡಿಎಸ್-ಬಿಜೆಪಿ ಮೈತ್ರಿ ನಿರ್ಧಾರಕ್ಕೆ ಕೇರಳದ ಘಟಕ ಒಪ್ಪಿಗೆ ನೀಡಿದೆ ಎಂದು ದೇವೇಗೌಡ ಮಾಹಿತಿ ನೀಡಿದರು.
ಪಕ್ಷದ ಹಲವು ಮುಸ್ಲಿಂ ನಾಯಕರು ನಮ್ಮ ಜೊತೆಗಿದ್ದಾರೆ ಬೇರೆ ಬೇರೆ ರಾಜ್ಯದಲ್ಲಿ ಬೇರೆ ಬೇರೆ ಸನ್ನಿವೇಶ ಇದೆ. ರಾಷ್ಟ್ರೀಯ ರಾಜಕೀಯ ವ್ಯವಸ್ಥೆ ಭಿನ್ನವಾಗಿದೆ ಎಂದು ಹೇಳಿದರು. ಕುಮಾರಸ್ವಾಮಿ ಅವರು ಪಕ್ಷಕ್ಕೆ ಹಾಕಿಕೊಂಡ ಕಾರ್ಯಕ್ರಮಗಳ ಕಾರಣಕ್ಕಾಗಿ ಅವರ ನಾಯಕತ್ವಕ್ಕೆ ಮಾನ್ಯತೆ ಇದೆ. ಈ ಕಾರಣಕ್ಕಾಗಿ ಅವರು ಶಾಸಕಾಂಗ ಪಕ್ಷದ ನಾಯಕತ್ವದ ಜೊತೆಗೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ಸಹ ನಿರ್ವಹಣೆ ಮಾಡಬೇಕು ಎಂಬುದು ನಮ್ಮ ನಿರ್ಧಾರ ಎಂದು ತಿಳಿಸಿದರು.
ಪಕ್ಷ ಪುನಶ್ಚೇತನ ಮಾಡ್ತೇವೆ….
ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಚುನಾವಣೆ ಬಳಿಕ ನಡೆದ ರಾಜಕೀಯ ಘಟನೆಗಳ ಹಿನ್ನಲೆಯಲ್ಲಿ ಹಳೆ ಘಟಕ ವಿಸರ್ಜನೆ ಮಾಡಿ ಹೊಸ ಸಮಿತಿ ರಚನೆ ಮಾಡಲಾಗಿದೆ. ಪಕ್ಷವನ್ನು ಪುನಶ್ಚೇತನಗೊಳಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಜವಾಬ್ದಾರಿ ನಿರ್ವಹಣೆ ಮಾಡಲು ಹೇಳಿದ್ದಾರೆ. ಕೋರ್ ಕಮಿಟಿ ಹಾಗೂ 18 ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು. ಎಲ್ಲರ ಸಹಮತದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ವಿಜಯ ದಶಮಿ ಬಳಿಕ ಪಕ್ಷ ಸಂಘಟನೆ ಹಾಗೂ ರಾಜ್ಯದ ಸಮಸ್ಯೆ ಹಿನ್ನಲೆಯಲ್ಲಿ ಪರಿಣಾಮವಾಗಿ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ