ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಲು ಆದೇಶ : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಿ ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದಲ್ಲಿ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಸರ್ಕಾರ ಆದೇಶ ಹೊರಡಿಸಿದೆ.
ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆ ಸಮಯದಲ್ಲಿ ಕಚೇರಿಗಳ ಒಳಗೆ ಮತ್ತು ಕಾರಿಡಾರ್‌ಗಳಲ್ಲಿ ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಬಳಸುವುದರಿಂದ ಹಾನಿಕಾರಕ ಬಣ್ಣವು ನೆಲಹಾಸಿನ ಮೇಲೆ ಬಿದ್ದು, ಅನೇಕ ತಿಂಗಳುಗಳ ಕಾಲ ಹಾಗೆಯೇ ಅಂಟಿಕೊಂಡು ಉಳಿಯುತ್ತದೆ.ಇದರಿಂದ ಈ ಕಟ್ಟಡದ ನೆಲಹಾಸುಗಳ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದ್ದು, ಆಯುಧಪೂಜೆ ವೇಳೆ ಈ ಮೂರು ಕಟ್ಟಡಗಳ ಕಚೇರಿ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಕುಂಬಳಕಾಯಿ ಮತ್ತು ರಂಗೋಲಿಗಳಲ್ಲಿ ಯಾವುದೇ ರೀತಿಯ ರಾಸಾಯನಿಕ ಮಿಶ್ರಿತ ಬಣ್ಣ/ಕುಂಕುಮ/ಅರಿಶಿನ/ಸುಣ್ಣ ಹಾಗೂ ಇನ್ನಿತರ ವಸ್ತುಗಳನ್ನು ಕಡ್ಡಾಯವಾಗಿ ಬಳಸಬಾರದು ಎಂದು ಸೂಚಿಸಲಾಗಿದೆ.

ಈ ಆದೇಶದ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟನೆ ನೀಡಿದ್ದು, ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ ಎಂದು ಹೇಳಿದ್ದಾರೆ.
ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ಅವರು ಕಳೆದ ವರ್ಷ ಬಿಜೆಪಿ ಸರ್ಕಾರವಿದ್ದಾಗ ದಸರಾ ಸಂದರ್ಭದಲ್ಲಿ ಹೊರಡಿಸಿದ್ದ ಇಂತಹದ್ದೇ ಆದೇಶದ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಜನತೆಯಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement