ಬೆಂಗಳೂರಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ ; ಜನರು ನಿರಾಳ

ಬೆಂಗಳೂರು: ಬೆಂಗಳೂರಿನ ಜನರ ನಿದ್ದೆಗೆಡಿಸಿದ್ದ ಚಿರತೆ ಬುಧವಾರ ಕೊನೆಗೂ ಸೆರೆ ಸಿಕ್ಕಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಬುಧವಾರ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ.
ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅಂದಿನಿಂದ ಚಿರತೆ ಕಾರ್ಯಾಚರಣೆ ನಡೆದಿತ್ತು. ಸುಮಾರು 150 ಅರಣ್ಯ ಇಲಾಖೆ ಅಧಿಕಾರಿಗಳು ಮೂರು ದಿನಗಳ ಕಾರ್ಯಾಚರಣೆಯ ನಂತರ ಅಂತಿಮವಾಗಿ ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರದಿಂದ ಚಿರತೆಯನ್ನು ಸೆರೆ ಹಿಡಿಯಲು ಆಯಕಟ್ಟಿನ ಸ್ಥಳಗಳಲ್ಲಿ ನಾಲ್ಕು ಬೋನುಗಳನ್ನು ಇಟ್ಟಿತ್ತು. ಅಲ್ಲದೆ, ಚಿರತೆ ಸೆರೆಗೆ ಐದು ತಂಡಗಳನ್ನು ನಿಯೋಜಿಸಲಾಗಿತ್ತು.

ಇಂದು, ಬುಧವಾರ ಬೆಳಿಗ್ಗೆ ಆನೇಕಲ್ ತಾಲೂಕಿನ ಬೊಮ್ಮನಹಳ್ಳಿಯ ಕೂಡ್ಲು ಗೇಟ್‌ ಬಳಿ‌ ಕೃಷ್ಣಾ ರೆಡ್ಡಿ ಬಡಾವಣೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಸಿಕ್ಕಿದ ತಕ್ಷಣವೇ ಆಗಮಿಸಿ ಕಾರ್ಯಾಚರಣೆಗೆ ಇಳಿದ ತಂಡದವರು ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿದ್ದಾರೆ. ಆದರೆ ಚುಚ್ಚುಮುದ್ದಿಗೂ ಬಗ್ಗದ ಚಿರತೆ ಕಟ್ಟಡದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಜಿಗಿದು ವೈದ್ಯ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿ ಪರಾರಿಯಾಗಿತ್ತು. ಆದರೆ ಮಧ್ಯಾಹ್ನ ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಕಿದ್ದ ಬಲೆಗೆ ಚಿರತೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ, ಅದನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ 7 ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೆ ಮಳೆ ಅಬ್ಬರ ; ಉಳಿದ ಜಿಲ್ಲೆಗಳಲ್ಲಿ ಚುರುಕು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement