ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತನಾಡಿದ್ರೆ ಪಕ್ಷದ ಯಾರೇ ಆದ್ರೂ ಶಿಸ್ತು ಕ್ರಮ : ಸುರ್ಜೇವಾಲ ಎಚ್ಚರಿಕೆ

ಬೆಂಗಳೂರು: ಪಕ್ಷದ ಸಂಘಟನೆ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡಬಾರದು. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಚಿವರು ಹಾಗೂ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸಭೆ ನಡೆಸಿದರು. ಈ ವೇಳೆ ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ, ನಿಗಮ-ಮಂಡಳಿ ನೇಮಕ ಹಾಗೂ ಪಕ್ಷದ ನಾಯಕರ ಹೇಳಿಕೆಗಳ ವಿಚಾರವಾಗಿ ಚರ್ಚೆ ನಡೆಸಿದರು.

ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ, ಪಕ್ಷದ ಶಾಸಕರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ಧಿ, ರಾಜ್ಯದ ಜನರಿಗೆ ಅನುಕೂಲವಾಗುವಂತಹ ವಿಷಯಗಳ ಬಗ್ಗೆ ಯೋಚಿಸಿ, ಈ ಬಗ್ಗೆ ಸಲಹೆ ನೀಡಲಿ. ಸಚಿವರು ಸಹ ತಮಗೆ ವಹಿಸಿದ ಇಲಾಖೆ ಹಾಗೂ ತಮ್ಮ ಉಸ್ತುವಾರಿ ಜಿಲ್ಲೆಗಳ ಬಗ್ಗೆ ಗಮನಹರಿಸಬೇಕು. ಅಧಿಕಾರ ಹಂಚಿಕೆ ಸೇರಿದಂತೆ ಇತರ ವಿಚಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಬಾರದು. ಆ ರೀತಿ ಮಾತನಾಡುವುದು ಪಕ್ಷದ ಶಿಸ್ತು ಉಲ್ಲಂಘಿಸಿದಂತಾಗುತ್ತದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ವಿಜಯಪುರದಲ್ಲಿ ಪಾಕ್ ಪರ ಪೋಸ್ಟ್ ಮಾಡಿದ ವಿದ್ಯಾರ್ಥಿನಿ ; ದೂರಿನ ನಂತರ ಕ್ಷಮೆಯಾಚನೆ

ಅಶಿಸ್ತಿನ ಹೇಳಿಕೆಗಳನ್ನು ಪಕ್ಷ ಸಹಿಸುವುದಿಲ್ಲ. ಶಿಸ್ತಿನ ಉಲ್ಲಂಘನೆಯನ್ನು ಯಾರೇ ಮಾಡಿದರೂ ಕ್ರಮ ಕೈಗೊಳ್ಳಲಾಗುವುದು. ಧ್ವನಿಗೆ ಪಕ್ಷದಲ್ಲಿ ಅವಕಾಶವಿದೆ. ಆದರೆ ನಿಮ್ಮ ದೂರು, ಸಲಹೆ, ಅಭಿಪ್ರಾಯಗಳನ್ನು ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರು ಅಥವಾ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು. ಅದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಲ್ಲ ಎಂದು ಹೇಳಿದರು.
ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ತಯಾರಿ ಕುರಿತು ಚರ್ಚೆ ಮಾಡಲಾಯಿತು. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸಂಸದರನ್ನು ಆಯ್ಕೆಯಾಗುವ ವಿಶ್ವಾಸ ನಮಗಿದೆ. ನಾವು 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಶ್ರಮಿಸುವುದಾಗಿ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರು ನಮಗೆ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement