ರೈತರ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್‍ಸೆಟ್‍ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್‌ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ವಿದ್ಯತ್ ಕೊರತೆಯಿದೆ ಎಂದು ನೀರಾವರಿ ಪಂಪ್‍ಸೆಟ್‍ಗಳಿಗೆ ಏಳು ಗಂಟೆಗಳ ಕಾಲವಿದ್ಯುತ್ ನೀಡುವುದಾಗಿ ಮೊದಲೇ ಘೋಷಣೆ ಮಾಡಿದ್ದೆವು. ಅದರಂತೆ ನೀಡುತ್ತೇವೆ ಎಂದರು.

ಕೆಲವರು ಸತತವಾಗಿ ಮೂರು ಫೇಸ್‍ನಲ್ಲಿ 5 ಗಂಟೆ ವಿದ್ಯುತ್ ನೀಡಿದರೆ ಸಾಕು ಎಂದು ಹೇಳಿದ್ದರಿಂದ 5 ಗಂಟೆಗಳ ಕಾಲ 3 ಫೇಸ್‍ನಲ್ಲಿ ವಿದ್ಯುತ್ ನೀಡುವಂತೆ ಸೂಚನೆ ನೀಡಲಾಗಿತ್ತು. ಆದರೆ ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ರೈತರು ಭೇಟಿ ಮಾಡಿ ಭತ್ತ ಬೆಳೆಯುವುದರಿಂದ 7 ಗಂಟೆಗಳ ಕಾಲ ನೀಡಬೇಕೆಂದು ಎಂದು ಮನವಿ ಮಾಡಿದರು. ಕಬ್ಬು ಹಾಗೂ ಭತ್ತ ಕಟಾವಿಗೆ ಬಂದಿರುವುದರಿಂದ ಈ ಭಾಗದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡಬೇಕು ಎಂದು ಸೂಚನೆ ನೀಡಲಾಗಿದೆ. ಉಳಿದ ಭಾಗಗಳಿಗೆ ನೀಡುತ್ತಿದ್ದ 5 ಗಂಟೆಗಳ ವಿದ್ಯುತ್ ಅನ್ನು ಸಹ 7 ಗಂಟೆಗಳ ಕಾಲ ನೀಡಲು ಸಾಧ್ಯವಾಗುತ್ತದೆ ಎಂದು ಸಭೆಯಲ್ಲಿ ತಿಳಿಸಲಾಗಿದೆ ಎಂದರು.
ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ. ಸೆಕ್ಷನ್‌ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement