ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ಎತ್ತಂಗಡಿ ಮಾಡಲಾಗಿದೆ. ಶಿವಮೊಗ್ಗದಲ್ಲಿದ್ದ ಅವರನ್ನು ಕೋಲಾರಕ್ಕೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಶಿವಮೊಗ್ಗದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೆಕ್ಕಾಧೀಕ್ಷಕರಾಗಿದ್ದ ಷಡಕ್ಷರಿ ಅವರನ್ನು ಕೋಲಾರ ಜಿಲ್ಲೆಯಲ್ಲಿ ಖಾಲಿ ಇದ್ದ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾಯಿಸಿ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ (ಆಡಳಿತ ಮತ್ತು ಮುಂಗಡಗಳು ವಿಭಾಗ) ಆದೇಶಿಸಿದ್ದಾರೆ.
ಷಡಕ್ಷರಿ ಶಿವಮೊಗ್ಗದಲ್ಲಿ ಕರ್ತವ್ಯ ಸ್ಥಾನದಲ್ಲಿರದೇ ಬೆಂಗಳೂರಿನಲ್ಲಿಯೇ ಹೆಚ್ಚು ಸಮಯ ಇರುತ್ತಾರೆ ಎನ್ನುವ ಆರೋಪ ಕೇಳಿಬಂದಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಇದೀಗ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾಯಿಸಿದೆ. ಹೆಚ್ಚಿನ ಕೆಲಸದ ಒತ್ತಡವಿರುವ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರನ್ನಾಗಿ ನೇಮಿಸಿದೆ.
ಅಲ್ಲದೆ,ರಾಯಲ್ಟಿ ಪಾವತಿಸದೆ ಶಿವಮೊಗ್ಗದ ಅಬ್ಬಲಗೆರೆ ಕೆರೆಯಿಂದ ಅಕ್ರಮವಾಗಿ ಮಣ್ಣು ಸಾಗಿಸಿ ಸರ್ಕಾರದ ಖಜಾನೆಗೆ ನಷ್ಟ ಮಾಡಿದ್ದಾರೆ ಎಂದು ಅವರು ವಿರುದ್ಧ ಆರೋಪವಿತ್ತು. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯತ ಕಾರ್ಯಪಾಲಕ ಇಂಜಿನಿಯರ್ ವರದಿ ನೀಡಿದ್ದರು. ಅದರಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸಿ.ಎಸ್.ಷಡಕ್ಷರಿಯವರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ