ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳಿಗೆ ಷರತ್ತು ಬದ್ಧ ಜಾಮೀನು

ಬೆಂಗಳೂರು: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.
ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ವಿಧಿಸಿ ಜಾಮೀನು ನೀಡಿದೆ.
“ಪ್ರಕರಣದ ವಿಚಾರಣೆ ಮುಗಿಯುವರೆಗೆ ಚಿತ್ರದುರ್ಗ ಜಿಲ್ಲೆಯ ಪ್ರವೇಶ ಮಾಡಬಾರದು. ಎರಡು ಲಕ್ಷ ರೂಪಾಯಿ ವೈಯಕ್ತಿ ಬಾಂಡ್‌ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷಿಗಳಿಗೆ ಬೆದರಿ ಹಾಕುವಂತಿಲ್ಲ. ನ್ಯಾಯಾಲಯದ ವಶಕ್ಕೆ ಪಾಸ್‌ಪೋರ್ಟ್‌ ಸಲ್ಲಿಸಬೇಕು. ವಿಡಿಯೊ ಕಾನ್ಫ್‌ರೆನ್ಸ್‌ ಮೂಲಕ ವಿಚಾರಣೆಗೆ ಹಾಜರಾಗಬೇಕು. ಜಾಮೀನು ಮಂಜೂರು ಆದೇಶವನ್ನು ಶರಣರು ದುರ್ಬಳಕೆ ಮಾಡಿಕೊಳ್ಳಬಾರದು. ನ್ಯಾಯಾಲಯ ವಿಧಿಸಿದ ಷರತ್ತು ಉಲ್ಲಂಘಿಸಿದರೆ, ಜಾಮೀನು ತನ್ನಿಂದ ತಾನೇ ರದ್ದಾಗಲಿದೆ” ಎಂಬ ಷರತ್ತುಗಳನ್ನು ವಿಧಿಸಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ. ಆದರೆ ಕಾನೂನಿನ ತೊಡಕಿನ ಹಿನ್ನೆಲೆಯಲ್ಲಿ ಶರಣರು ತಕ್ಷಣಕ್ಕೆ ಬಿಡುಗಡೆಯಾಗುವ ಬಗ್ಗೆ ಸಂದೇಹಗಳಿವೆ.
ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ಮತ್ತು ಕ್ರಿಮಿನಲ್‌ ಮೇಲ್ಮನವಿಗಳ ವಿಚಾರಣೆಯನ್ನು ಅಕ್ಟೋಬರ್‌ 31ರಂದು ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠವು ಬುಧವಾರ ಪ್ರಕಟಿಸಿತು.
ಮುರುಘಾ ಶ್ರೀಗಳ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್ 1 ರಂದು ಬಂಧಿಸಿದ್ದು, ಒಂದು ವರ್ಷದಿಂದ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ–2012, ಭಾರತೀಯ ದಂಡ ಸಂಹಿತೆ–1860, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ-1988, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯಿದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯಿದೆ–2015ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement