ಉತ್ತರಕಾಶಿ : ಉತ್ತರಾಖಂಡ ರಾಜ್ಯದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತಗೊಂಡಿದೆ. ಸುರಂಗ ಮಾರ್ಗ ಕಾಮಗಾರಿಯಲ್ಲಿ ತೊಡಗಿದ್ದ ಸುಮಾರು 40 ಕಾರ್ಮಿಕರು ಅದರ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕಾರ್ಮಿಕರನ್ನು ರಕ್ಷಣೆ ಮಾಡಲು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.
ಉತ್ತರಕಾಶಿಯಲ್ಲಿ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತಿತ್ತು. ಭಾನುವಾರ ಮುಂಜಾನೆ ಈ ಸುರಂಗ ಮಾರ್ಗದ ಒಂದು ಬದಿ ಕುಸಿದಿದೆ.
ಕಾರ್ಮಿಕರು ಒಳಗೆ ಸಿಲುಕಿದ್ದಾರೆ. ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಾಣ ಮಾಡುತ್ತಿದ್ದ ಸುಮಾರು ನಾಲ್ಕೂವರೆ ಕಿ. ಮೀ. ಉದ್ದದ ಸುರಂಗ ಮಾರ್ಗದ 150 ಮೀಟರ್‌ನಷ್ಟು ಉದ್ದದ ಭಾಗ ಕುಸಿತವಾಗಿದೆ ಎಂದು ಅಂದಾಜಿಸಲಾಗಿದೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ದಳದ ಸಿಬ್ಬಂದಿ ಸುರಂಗ ಮಾರ್ಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಯಲ್ಲಿ ತೊಡಗಿದ್ದಾರೆ.
ಸುರಂಗ ಮಾರ್ಗ ನಿರ್ಮಾಣ ಕಾರ್ಯದಲ್ಲಿ 40 ಕಾರ್ಮಿಕರು ತೊಡಗಿದ್ದರು. ಸುರಂಗ ಕುಸಿದು ಬಿದ್ದಿರುವ ಮಣ್ಣನ್ನು ತೆರವುಗೊಳಿಸಿ ಕಾರ್ಮಿಕರನ್ನು ತಲುಪಲು ಪ್ರಯತ್ನ ನಡೆಸಲಾಗುತ್ತಿದೆ. ಪೈಪ್‌ಗಳ ಮೂಲಕ ಕಾರ್ಮಿಕರು ಇರುವ ಸ್ಥಳಕ್ಕೆ ಆಮ್ಲಜನಕವನ್ನು ಪೂರೈಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾರ್ಮಿಕರ ರಕ್ಷಣಾ ಕಾರ್ಯಕ್ಕೆ ಎರಡು ಅಥವ ಮೂರು ದಿನ ಬೇಕು ಎಂದು ಅಂದಾಜಿಸಲಾಗಿದೆ. ಘಟನೆ ಕುರಿತು ಕೇಂದ್ರ ಸರ್ಕಾರಕ್ಕೆ ಸಹ ಮಾಹಿತಿ ನೀಡಲಾಗಿದ್ದು, ಅಗತ್ಯ ನೆರವು ನೀಡಲು ಸಹ ರಾಜ್ಯ ಸರ್ಕಾರ ಮನವಿ ಮಾಡಿದೆ. ಕೇಂದ್ರ ಸರ್ಕಾರ ಸಹ ರಾಜ್ಯದ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದೆ.
ನಿಮ್ಮ ಕಾಮೆಂಟ್ ಬರೆಯಿರಿ