ದಾಖಲೆ ಬಿಡುಗಡೆ ಮಾಡಿ ”ತಾನು ಕಳ್ಳ ಪರರ ನಂಬ” ಎಂದು ಕುಮಾರಸ್ವಾಮಿಗೆ ಲೇವಡಿ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರ ಫೋನ್ ಸಂಭಾಷಣೆ ವೀಡಿಯೊ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಲ್ಲಿದದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಡುವೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.
ಕುಮಾರಸ್ವಾಮಿ ಆರೋಪ ತಳ್ಳಿ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ, ಯತೀಂದ್ರ ಸಿದ್ದರಾಮಯ್ಯ ಯಾವ ವರ್ಗಾವಣೆ ಬಗ್ಗೆ ಕೂಡ ಮಾತನಾಡಿಲ್ಲ, ಶಾಲೆಗಳ ಅಭಿವೃದ್ಧಿ ಪಟ್ಟಿ ಬಗ್ಗೆ ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ತಾ ಕಳ್ಳ ಇತರರ ನಂಬ” ಎಂಬ ಗಾದೆ ಮಾತನ್ನು ಒಬ್ಬ ಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಫೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ‌ ಕುಮಾರಸ್ವಾಮಿ ಅವರು ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಡಾ.ಯತೀಂದ್ರ ಅವರು ಫೋನ್‌ನಲ್ಲಿ ಹೆಸರಿಸಿದ ವಿವೇಕಾನಂದ ಅವರು ವರುಣ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ). ವರುಣ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿಯಾಗಬೇಕಿರುವ ಕೊಠಡಿಗಳ ವಿವರದ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳುಹಿಸಿದ್ದರು. ಇದರ ಬಗ್ಗೆಯೇ ನಾನು ಡಾ.ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆಯನ್ನು ಲಗತ್ತಿಸಿದ್ದೇನೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆ

ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುತ್ತಿರುವ ಸುಳ‍್ಳು ಸುದ್ದಿಗಳನ್ನು ಅಮಾಯಕ ಜನ ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಯತೀಂದ್ರ ಸಿದ್ದರಾಮಯ್ಯ ಅವರು ಫೋನಿನಲ್ಲಿ ಮಾತನಾಡುವ ವಿಡಿಯೋವನ್ನು ಟ್ವೀಟ್‌ ಮಾಡಿದ್ದ ಕುಮಾರಸ್ವಾಮಿ ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ತೊಡಗಿದೆ ಎಂದು ಆರೋಪಿಸಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement