ಮೈಸೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದು, ಪ್ರತಿ ತಿಂಗಳು ದೇವಸ್ಥಾನಕ್ಕೆ 2 ಸಾವಿರ ರೂಪಾಯಿ ನೀಡಲು ಸರ್ಕಾರ ನಿರ್ಧರಿಸಿದೆ.
ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಈ ವೇಳೆ ನಾಡದೇವತೆ ಚಾಮುಂಡೇಶ್ವರಿಗೆ 2000 ರೂ. ಅರ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆಯ ಹಣ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರಿಗೆ ವಿಧಾನ ಪರಿಷತ್ ಸದಸ್ಯ ದಿನೇಶ ಗೂಳಿಗೌಡ ಅವರು ಪತ್ರ ಬರೆದಿದ್ದರು. ಅದಕ್ಕೆ ಕಾಂಗ್ರೆಸ್ ಸರ್ಕಾರ ಸಮ್ಮತಿ ಸೂಚಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ ಅವರಿಗೆ ಪತ್ರ ಬರೆದಿರುವ ದಿನೇಶ ಗೂಳಿಗೌಡ ಅವರು, ಗೃಹಲಕ್ಷ್ಮಿ ಯೋಜನೆಗೂ ಮುನ್ನ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ಹರಕೆ ಹೊತ್ತಿದ್ದೀರಿ. ನಂತರ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಾಯಿತು. ಯೋಜನೆಯ ಮೊದಲ ಹಣ ತಾಯಿ ಚಾಮುಂಡೇಶ್ವರಿಗೆ ಅರ್ಪಿಸಲಾಗಿತ್ತು. ಹೀಗಾಗಿ ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿಗೆ ಎರಡು ಸಾವಿರ ನೀಡಿ ಎಂದು ಪತ್ರ ಬರೆದು ಅವರು ಮನವಿ ಮಾಡಿದ್ದರು.
ಇದಕ್ಕೆ ಡಿಸಿಎಂ ಡಿ ಕೆ ಶಿವಕುಮಾರ ಸ್ಪಂದಿಸಿದ್ದು, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ಅರ್ಪಿಸಲು ಒಪ್ಪಿಗೆ ಸೂಚಿಸಿದ್ದಾರೆ ಜೊತೆಗೆ ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಸೂಚಿಸಿದ್ದಾರೆ.
ರಾಜ್ಯದ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಗೃಹ ಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹ ಲಕ್ಷ್ಮಿ ಯೋಜನೆ ಜಾರಿಗೆ ತರುವುದಾಗಿ ಪಕ್ಷದ ನಾಯಕರು ಚುನಾವಣೆಗೆ ಮುನ್ನವೇ ಗ್ಯಾರಂಟಿ ಘೋಷಿಸಿದ್ದರು. ಈ ಯೋಜನೆಯಡಿ ಮನೆಯ ಯಜಮಾನಿಗೆ 2000 ರೂಪಾಯಿ ಸಹಾಯಧನ ನೀಡಲಾಗುತ್ತದೆ.
ನಿಮ್ಮ ಕಾಮೆಂಟ್ ಬರೆಯಿರಿ