ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್‌.ಅಶೋಕ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ (BJP Meeting) ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿತ್ತು.
ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಪಕ್ಷದೊಳಗೆ ಅಸಮಾಧಾನ ಉಂಟಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತಕುಮಾರ ಗೌತಮ ಆಗಮಿಸಿದ್ದರು.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ನಡೆದ ಬಿಎಲ್​ಪಿ ಸಭೆಯಲ್ಲಿ ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ವೀಕ್ಷಕರು ವಿರೋಧದ ನಡುವೆಯೂ ವಿಪಕ್ಷ ನಾಯಕನಾಗಿ ಆರ್ ಅಶೋಕ ಅವರನ್ನು ಆಯ್ಕೆ ಮಾಡಿದ್ದಾರೆ. ಶಾಸಕಾಂಗ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರಾದ ನಿರ್ಮಲಾ ಸೀತಾರಾಮನ್‌, ದುಷ್ಯಂತಕುಮಾರ ಗೌತಮ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ರಾಜ್ಯ ಬಿಜೆಪಿ ಘಟಕದ ಸಂಘಟನಾ ಕಾರ್ಯದರ್ಶಿ ರಾಜೇಶ ಮತ್ತಿತರರು ಪಾಲ್ಗೊಂಡಿದ್ದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಶೋಕ ಹೆಸರನ್ನು ಸೂಚಿಸಿದರೆ, ಮಾಜಿ ಸಚಿವ ಸುನೀಲಕುಮಾರ ಅನುಮೋದನೆ ಮಾಡಿದರು.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆರ್ ಅಶೋಕ್ ಅವರು, ಪಕ್ಷ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ 45 ವರ್ಷಗಳಿಂದ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಜನರ ಮುಂದಿಡಲು ಪ್ರಯತ್ನಿಸುತ್ತೇವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲುಲು ಪ್ರಯತ್ನಿಸುತ್ತೇವೆ ಎಂದರು.
ಪಕ್ಷದಲ್ಲಿ ಅಸಮಾಧಾನ  
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಹೈಕಮಾಂಡ್​ ವೀಕ್ಷಕರು ಪ್ರಮುಖರ ಜೊತೆ ಸಭೆ ನಡೆಸಿದ್ದರು. ವರಿಷ್ಠರ ನಿರ್ಧಾರ ಬಗ್ಗೆ ಗಮನಕ್ಕೆ ತಂದಿದ್ದರು. ಇದೇ ವೇಳೆ ಆರ್​ ಅಶೋಕ ನೇಮಕ ಕುರಿತು ತಿಳಿಸಿದಾಗ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್, ರಮೇಶ್ ಜಾರಕಿಹೊಳಿ ಸಭೆಯಿಂದ ತೆರಳಿದ್ದರು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement