ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ: ಸಂತ್ರಸ್ತೆ ಮನೆಗೆ ಗೃಹ ಸಚಿವರ ಭೇಟಿ, 7 ಮಂದಿ ಬಂಧನ

ಬೆಳಗಾವಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ​ ಅವರು ಹೇಳಿದ್ದಾರೆ.
ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಮಹಿಳೆಯ ಆರೋಗ್ಯವನ್ನು ಗೃಹ ಸಚಿವರು ವಿಚಾರಿಸಿದರು. ಈ ವೇಳೆ ಗೃಹಸಚಿವರೊಂದಿಗೆ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜೊತೆಗಿದ್ದರು.
ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಾ. ಪರಮೇಶ್ವರ ಅವರು, 24 ವರ್ಷದ ಯುವಕನೊಬ್ಬ ಯುವತಿಯನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾನೆ. ಹುಡುಗ-ಹುಡುಗಿ ಪ್ರೀತಿಸುತ್ತಿದ್ದರು ಎಂಬ ಮಾಹಿತಿ ಇದೆ. ಹೀಗಾಗಿ ಅವರಿಬ್ಬರು ಓಡಿಹೋಗಿದ್ದಕ್ಕೆ ಸಿಟ್ಟಿಗೆದ್ದು ಯುವಕನ ತಾಯಿ ಮೇಲೆ ಹಲ್ಲೆ ಮಾಡಿದ್ದಾರೆ. ಸುಮಾರು 8 ರಿಂದ 10 ಜನ ಹಲ್ಲೆ ಮಾಡಿ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿದ್ದಾರೆ. ಪೊಲೀಸರಿಗೆ ವಿಷಯ ಗೊತ್ತಾಗಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 7 ಜನರನ್ನು ಬಂಧಿಸಿದ್ದಾರೆ ಎಂದು ಹೇಳಿದರು.
ಓಡಿ ಹೋಗಿರುವ ಯುವಕ ಯುವತಿಯನ್ನು ಪೊಲೀಸರು ಹುಡುಕಾಡುತ್ತಿದ್ದಾರೆ. ಆದರೆ ಇಂತಹ ಅಮಾನವೀಯ ಘಟನೆಗಳು ಆಗಬಾರದು, ಅವರು ಪೊಲೀಸರಿಗೆ ದೂರು ನೀಡಿದ್ದರೆ ಪೊಲೀಸರೇ ಕ್ರಮ ತೆಗೆದುಕೊಳ್ಳುತ್ತಿದ್ದರು. ಮಾತನಾಡಿಕೊಂಡು ಬಗೆಹರಿಸಬಹದಿತ್ತು. ಆದರೆ ಇದು ಅಮಾನವೀಯ ಎಂದು ತಿಳಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿದ ಬಳಿಕ ಗೃಹ ಸಚಿವರು, ನೇರವಾಗಿ ಮಹಿಳೆಯ ಮನೆಗೆ ಭೇಟಿ ನೀಡಿದರು.
ಈ ವೇಳೆ ಯುವತಿಯ ಜೊತೆ ಓಡಿ ಹೋಗಿರುವ ಯುವಕನ ಅಜ್ಜಿ ಘಟನೆಯ ಬಗ್ಗೆ ಪರಮೇಶ್ವರ​ ಅವರಿಗೆ ಮಾಹಿತಿ ನೀಡಿದರು. ಈ ವೇಳೆ ಅಜ್ಜಿ ಕಣ್ಣೀರು ಹಾಕಿ, ಮೈಮೇಲೆ ಇರುವ ಬಂಗಾರವನ್ನು ತೆಗೆದುಕೊಂಡು ಹೋಗಿದ್ದಾರೆ. ಬೆತ್ತಲೆ ಮಾಡಿ, ಹಲ್ಲೆ ಮಾಡಿದ್ದಾರೆ ಎಂದು ಹೇಳಿದರು ಪರಮೇಶ್ವರ ಅವರು ಸಮಾಧಾನಪಡಿಸಲು ಯತ್ನಿಸಿದರು.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ಇಂತಹ ಹೀನ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ; ಸಿಎಂ ಸಿದ್ದರಾಮಯ್ಯ
ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು ಎಂದು ಹೇಳಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement