ಸಂಸತ್‌ನಲ್ಲಿ ಭದ್ರತಾ ಲೋಪ: ಯುಎಪಿಎ ಅಡಿ ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು

ನವದೆಹಲಿ: ಸಂಸತ್‌ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪದ ನಡೆದಿದ್ದು, ಘಟನೆ ಸಂಬಂಧ ದೆಹಲಿ ಪೊಲೀಸ್ ವಿಶೇಷ ವಿಭಾಗ ಕಾನೂನುಬಾಹಿರ ಚಟುವಟಿಕೆಗಳ ‌ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಘಟನೆಯಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಅವರೆಲ್ಲರೂ ಸಾಮಾಜಿಕ ಮಾಧ್ಯಮಗಳಲ್ಲಿ ಪರಸ್ಪರ ಸಂಪರ್ಕದಲ್ಲಿದ್ದರು. ಆರೋಪಿಗಳು ಕೆಲ ದಿನಗಳ ಹಿಂದೆಯೇ ಯೋಜನೆ ರೂಪಿಸಿದ್ದರು. ಅವರ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ದೇಶದ್ರೋಹ, ಭಯೋತ್ಪಾದನೆ, ಕಾನೂನುಬಾಹಿರ, ಸಂಘಟಿತ ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಂಡ ಸಂಘ-ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ದ ಈ ಯುಎಪಿಎ ಕಾಯ್ದೆಯಡಿ ಶಿಕ್ಷೆಗೆ ಗುರಿಪಡಿಸಲಾಗುತ್ತದೆ. ಈ ಕಾಯ್ದೆಯು  ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ಉಂಟುಮಾಡುವ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು  ಸರ್ಕಾರಕ್ಕೆ ನೀಡುತ್ತದೆ.

ಘಟನೆಗೆ ಸಂಬಂಧಿಸಿದಂತೆ ಮೈಸೂರಿನ ವಿಜಯನಗರ ನಿವಾಸಿ, ಎಂಜಿನಿಯರಿಂಗ್ ಪದವೀಧರ ಮನೋರಂಜನ್‌ ಡಿ., ಲಕ್ನೋದ ಸಾಗರ ಶರ್ಮಾ, ಹರಿಯಾಣದ ಹಿಸಾರಿನ ನೀಲಂ, ಮಹಾರಾಷ್ಟ್ರದ ಲಾತೂರಿನ ಅಮೋಲ್ ಶಿಂಧೆ ಹಾಗೂ ವಿಕ್ಕಿ ಶರ್ಮಾ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಶೋಧ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಆದೇಶಿಸಿದ್ದಾರೆ.
ರೈತರ ಪ್ರತಿಭಟನೆ, ಮಣಿಪುರ ಬಿಕ್ಕಟ್ಟು ಮತ್ತು ನಿರುದ್ಯೋಗದಂತಹ ಸಮಸ್ಯೆಗಳಿಂದ ನಾವು ಬೇಸತ್ತಿದ್ದೇವೆ. ಈ ಕಾರಣಕ್ಕಾಗಿ ಕೃತ್ಯವನ್ನು ನಡೆಸಿದ್ದೇವೆ ಎಂದು ವಿಚಾರಣೆಯ ಸಮಯದಲ್ಲಿ ಅಮೋಲ್ ತನಿಖಾಧಿಕಾರಿಗಳಿಗೆ ತಿಳಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಜಮ್ಮು-ಕಾಶ್ಮೀರ : ಮೂವರು ಲಷ್ಕರ್ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಮಹಾರಾಷ್ಟ್ರದ ಲಾತೂರಿನ ನಿವಾಸಿಯಾಗಿರುವ ಅಮೋಲ್ ಪದವೀಧರನಾಗಿದ್ದರೂ ನಿರುದ್ಯೋಗಿ. ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ₹1,200 ಮೌಲ್ಯದ ಐದು ಬಣ್ಣದ ಹೊಗೆ ಡಬ್ಬಿಗಳನ್ನು ಖರೀದಿಸಿದ್ದೇನೆ ಎಂದು ಪೊಲೀಸರಿಗೆ ತಿಳಿಸಿರುವುದಾಗಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪೊಲೀಸ್ ಸಿಬ್ಬಂದಿ ಕರೆದೊಯ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನೀಲಂ, ‘ಭಾರತ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ನಾವು ನಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದಾಗ, ನಮ್ಮನ್ನು ಜೈಲಿಗೆ ಹಾಕಲಾಗುತ್ತದೆ. ನಾವು ಯಾವುದೇ ಸಂಸ್ಥೆಗೆ ಸೇರಿಲ್ಲ. ನಾವು ನಿರುದ್ಯೋಗಿಗಳು’ ಎಂದು ಹೇಳಿದ್ದಾರೆ.
ಬುಧವಾರ ಕಲಾಪ ನಡೆಯುತ್ತಿರುವಾಗಲೇ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗುತ್ತಾ ‘ಸ್ಮೋಕ್‌ ಕ್ಯಾನ್‌’ ಹಾರಿಸಿ ಗೊಂದಲ ಸೃಷ್ಟಿಸಿದರು. ಸದನದಲ್ಲಿ ಆತಂಕ ಸೃಷ್ಟಿಯಾಗಿತ್ತು.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement