ನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ ; ಫೆಬ್ರವರಿ 28 ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಕಾಯ್ದೆಗೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವ ಕುರಿತು ಗುರುವಾರ ನಡೆದ ಉನ್ನತ ಮಟ್ಟದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು. ಇದಕ್ಕಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತರಲಾಗುವುದು ಎಂದು ತಿಳಿಸಿದರು.

ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿ ಇರತಕ್ಕದ್ದು ಎಂದು ಇದೆ. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರಬೇಕು ಎಂದು ತಿಳಿಸಲಾಗಿದೆ. ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

ಶಾಂತಿಯುತವಾದ ಪ್ರತಿಭಟನೆ ಮಾಡಲು ನಮ್ಮ ಸರ್ಕಾರದ ಆಕ್ಷೇಪ ಇಲ್ಲ. ಆದರೆ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು ಎಂದು 2022ರಲ್ಲಿ ಹೈಕೋರ್ಟ್ ಆದೇಶಿಸಿದೆ. ರಾಜ್ಯ ಸರ್ಕಾರ ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ. ಯಾರೇ ಆಗಲಿ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement