ಬೆಂಗಳೂರು : ಕಳೆದ ನಾಲ್ಕು ವರ್ಷದಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿದೆ ಎಂದು ಆರೋಪಿಸಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ ಅವರ ಏಕ ವ್ಯಕ್ತಿ ಆಯೋಗದ ಮುಂದೆ ಏಕೆ ಒಂದೇ ಒಂದು ಪ್ರಕ್ರಿಯೆ ನಡೆದಿಲ್ಲ ಎಂಬುದನ್ನು ರಾಜ್ಯ ಸರ್ಕಾರ ತಿಳಿಸಬೇಕು. ಇಲ್ಲವಾದಲ್ಲಿ ಸೂಕ್ತ ಆದೇಶ ಮಾಡಲಾಗುವುದು ಎಂದು ಇತ್ತೀಚಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಸಿದೆ.
ರಾಜ್ಯ ಸರ್ಕಾರವು ನ್ಯಾಯಮೂರ್ತಿ ನಾಗಮೋಹನ ದಾಸ ಅವರ ಏಕವ್ಯಕ್ತಿ ಆಯೋಗ ರಚಿಸಿ 2023ರ ಆಗಸ್ಟ್ 5ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮೆರ್ಸಸ್ ನಿಕ್ಷೇಪ್ ಇನ್ಫ್ರಾ ಪ್ರಾಜೆಕ್ಟ್ಸ್ ಸೇರಿದಂತೆ ಹಲವು ಗುತ್ತಿಗೆ ಕಂಪೆನಿಗಳು ಮತ್ತು ಗುತ್ತಿಗೆದಾರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
“ಮುಂದಿನ ವಿಚಾರಣೆಯ ವೇಳೆಗೆ ಸಮಿತಿಯ ಮುಂದೆ ಇದುವರೆಗೆ ಏಕೆ ಒಂದೇ ಒಂದು ಪ್ರಕ್ರಿಯೆ ನಡೆದಿಲ್ಲ ಎಂಬುದರ ಕುರಿತು ತಿಳಿಸಬೇಕು. ಒಂದೊಮ್ಮೆ ಪ್ರಕ್ರಿಯೆ ನಡೆಯದಿರುವುದರ ಬಗ್ಗೆ ಸಕಾರ ಸಮರ್ಥನೆ ಮಾಡಿಕೊಳ್ಳದಿದ್ದರೆ ಅರ್ಜಿದಾರರ ಕೋರಿಕೆಯಂತೆ ಸೂಕ್ತ ಆದೇಶ ಮಾಡಬೇಕಾಗುತ್ತದೆ” ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ. ನ್ಯಾ. ನಾಗಮೋಹನ್ ದಾಸ್ ಅವರ ನೇತೃತ್ವದ ಏಕಸದಸ್ಯ ಸಮಿತಿ ರಚಿಸಿರುವ 2023ರ ಆಗಸ್ಟ್ 5ರ ಆದೇಶ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
25.08.2023ರಿಂದ ಯಾವುದೇ ಪ್ರಕ್ರಿಯೆ ನಡೆಯದಿರುವುದು ಮತ್ತು 13.12.2023ರ ಆದೇಶದ ನಂತರವೂ ಏನೂ ಬೆಳವಣಿಗೆಯಾಗದಿರುವುದನ್ನು ಗಮನಿಸಿದರೆ ಮೇಲ್ನೋಟಕ್ಕೆ ಅದು ಹಿರಿಯ ವಕೀಲರು ಹೇಳಿರುವುದು ಸರಿ ಇರುವಂತಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅರ್ಜಿದಾರರನ್ನು ಹಿರಿಯ ವಕೀಲ ಉದಯ ಹೊಳ್ಳ ಅವರು ಪ್ರತಿನಿಧಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ