ಜಯಲಲಿತಾ ಚಿನ್ನಾಭರಣ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಬೆಂಗಳೂರಿನ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಚಿನ್ನಾಭರಣಗಳು ಮತ್ತು ಇತರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.
ಮಾರ್ಚ್‌ 6 ಮತ್ತು 7ರಂದು ಜಯಲಲಿತಾ ಅವರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ವಿಶೇಷ ಸಿಬಿಐ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ಬಿದ್ದಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾದ ನೂರಾರು ಕೋಟಿ ಮೌಲ್ಯದ ಚಿನ್ನಾಭರಣ ಸೇರಿ ಇತರ ವಸ್ತುಗಳನ್ನು ಕಾನೂನಾತ್ಮಕ ವಾರಸುದಾರರಾದ ತಮಗೆ ಬಿಡುಗಡೆ ಮಾಡಬೇಕು ಎಂದು ಜಯಲಲಿತಾ ಅವರ ಸಹೋದರನ ಮಕ್ಕಳು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯವು 2023ರ ಜುಲೈ 12ರಂದು ವಜಾ ಮಾಡಿತ್ತು.

ಇದನ್ನು ಪ್ರಶ್ನಿಸಿ ಅರ್ಜಿದಾರರಲ್ಲಿ ಒಬ್ಬರಾದ ಜೆ ದೀಪಾ ಎಂಬವರು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತು. ಪ್ರಕರಣದ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮಾರ್ಚ್‌ 26ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಜಯಲಲಿತಾ ಅವರ ಕಾನೂನುಬದ್ಧ ವಾರಸುದರಾಗಿದ್ದು, ಅವರ ಎಲ್ಲ ಚಿನ್ನಾಭರಣಗಳನ್ನು ಅರ್ಜಿದಾರರಿಗೆ ಹಸ್ತಾಂತರ ಮಾಡಬೇಕು ಎಂದು ಕೋರಿದರು.
ಈ ವಾದ ದಾಖಲಿಸಿಕೊಂಡ ಪೀಠವು ವಿಶೇಷ ಸಿಬಿಐ ನ್ಯಾಯಾಲಯದಿಂದ ತಮಿಳುನಾಡು ಸರ್ಕಾರಕ್ಕೆ ಮಾರ್ಚ್‌ 6ರಿಂದ ನಡೆಯಬೇಕಿದ್ದ ಚಿನ್ನಾಭರಣಗಳ ಹಸ್ತಾಂತರ ಪ್ರಕ್ರಿಯೆಗೆ ತಡೆ ನೀಡಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೀತಿಯೇ ಸಿದ್ದು, ಪರಮೇಶ್ವರ ವೀಡಿಯೊ ಹೊರಬರಬಹುದು : ರಮೇಶ ಜಾರಕಿಹೊಳಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement