5, 8, 9, 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್ ಆದೇಶ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ರದ್ದುಪಡಿಸಿದೆ.
ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಆಕ್ಷೇಪಿಸಿ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಮ್ಯಾನೇಜ್‌ಮೆಂಟ್‌ ಒಕ್ಕೂಟ (ರುಪ್ಸಾ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಫೆಬ್ರವರಿ 2ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ರವಿ ವಿ. ಹೊಸಮನಿ ಅವರ ನೇತೃತ್ವದ ಏಕಸದಸ್ಯ ಪೀಠ ಬುಧವಾರ ಪ್ರಕಟಿಸಿತು.

ರಾಜ್ಯ ಶಿಕ್ಷಣ ಕಾಯಿದೆಯ ಸೆಕ್ಷನ್‌ 22ರ ಅಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನ ಹೊರಡಿಸಿದ್ದ ರಾಜ್ಯ ಸರ್ಕಾರ ಬೋರ್ಡ್ ಮಟ್ಟದ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದಾಗಿ ತಿಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ ಒಕ್ಕೂಟವು ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ಈ ವಿಚಾರದಲ್ಲಿ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸುವುದು ಕಷ್ಟ. ಹೀಗಾಗಿ, ಎಲ್ಲಾ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸಲು ಅವಕಾಶ ನೀಡಬಾರದು ಎಂದು ವಾದಿಸಿದ್ದರು.

ಪ್ರಮುಖ ಸುದ್ದಿ :-   ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

ಆದರೆ ಸರ್ಕಾರದ ವಕೀಲರು, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಗೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಮಕ್ಕಳ ಬುದ್ಧಿಮತ್ತೆ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ. ಪಠ್ಯಕ್ರಮದ ಹೊರತಾದ ಪ್ರಶ್ನೆಗಳನ್ನು ಕೇಳುವುದಿಲ್ಲ. ಹೀಗಾಗಿ, ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ವಾದಿಸಿದ್ದರು.
ಅರ್ಜಿದಾರ ಒಕ್ಕೂಟದ ಪರವಾಗಿ ವಕೀಲರಾದ ಕೆ ವಿ ಧನಂಜಯ, ಸುದರ್ಶನ ಸುರೇಶ, ಅನಿರುದ್ಧ್‌ ಕುಲಕರ್ಣಿ, ಸಾಯಿನಾಥ ಮತ್ತು ಅನನ್ಯ ಅವರು ವಾದಿಸಿದ್ದರು. ಈ ಆದೇಶದಿಂದ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ. ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯಿದೆಯಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ, ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement