ಇ.ಡಿ.ಅಧಿಕಾರಿಗಳ ಮೇಲೆ ಹಲ್ಲೆ ಪ್ರಕರಣ: ಕಲ್ಕತ್ತಾ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅಮಾನತುಗೊಂಡ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶಹಜಹಾನ್ ಶೇಖ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯದ (ಇ ಡಿ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಇದೇ ವೇಳೆ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ ಮೆಹ್ತಾ ಅವರಿದ್ದ ಪೀಠವು ಶೇಖ್ ನನ್ನು ಬಂಧಿಸಲು ವಿಳಂಬ ಮಾಡಿದ್ದಕ್ಕಾಗಿ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಸ್ಥಳೀಯ ಪೊಲೀಸರ ವಿರುದ್ಧ ಹೈಕೋರ್ಟ್ ಮಾಡಿದ ಕಟು ಅವಲೋಕನಗಳನ್ನು ತೆಗೆದುಹಾಕಿತು.

ವಿಳಂಬದ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಗವಾಯಿ ಅವರು ಶೇಖ್‌ ಅವರನ್ನು ಕೂಡಲೇ ಏಕೆ ಬಂಧಿಸಲಿಲ್ಲ ಎಂದು ಪ್ರಶ್ನಿಸಿದರು.
ಪ್ರಕರಣವನ್ನು ಪಶ್ಚಿಮ ಬಂಗಾಳ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪೀಠ ಹೇಳಿತು.
ಜಾರಿ ನಿರ್ದೇಶನಾಲಯ(ಇ.ಡಿ.)ವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ. ರಾಜು ಅವರು ಹೇಳಿಕೆಗಳನ್ನು ತೆಗೆದುಹಾಕುವಂತೆ ಪಶ್ಚಿಮ ಬಂಗಾಳದ ಕೋರಿದ್ದಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ. ಈ ಹಿನ್ನೆಲೆಯಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನ್ಯಾಯಾಲಯ ತೆಗೆದುಹಾಕಿತು. ಪಶ್ಚಿಮ ಬಂಗಾಳ ಸರ್ಕಾರವನ್ನು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಪ್ರತಿನಿಧಿಸಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ...| ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದ ಮಮತಾ ಬ್ಯಾನರ್ಜಿ

ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ಈ ವರ್ಷದ ಜನವರಿ 5ರಂದು ಅಕುಂಜಿಪಾರಾದಲ್ಲಿರುವ ಶಹಜಹಾನ್ ಅವರ ನಿವಾಸದ ಮೇಲೆ ದಾಳಿ ನಡೆಸಲು ಆಗಮಿಸಿದ ಇ ಡಿ ಅಧಿಕಾರಿಗಳನ್ನು ಸುಮಾರು 200 ಸ್ಥಳೀಯರು ಸುತ್ತುವರಿದು ಘೇರಾವ್ ಹಾಕಿ ಅವರ ವಾಹನಗಳನ್ನು ಧ್ವಂಸ ಮಾಡಿದ ಆರೋಪ ಕೇಳಿ ಬಂದಿತ್ತು. ಈ ವೇಳೆ ಘರ್ಷಣೆಯಲ್ಲಿ ಇ.ಡಿ. ಅಧಿಕಾರಿಗಳು ಗಾಯಗೊಂಡಿದ್ದರು. ಘಟನೆ ಹಿನ್ನೆಲೆಯಲ್ಲಿ ಶಹಜಹಾನ್‌ ನನ್ನು ಬಂಧಿಸುವಂತೆ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್‌ ಸೂಚಿಸಿದ್ದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement