ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ತನ್ನ ನೌಕರರ ತುಟ್ಟಿಭತ್ಯೆಯನ್ನು (Dearness Allowance) ಶೇ. ಶೇ.3.75ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು (Dearness Allowance) ಶೇಕಡಾ 38.75 ರಿಂದ ಶೇಕಡಾ 42.5 ಕ್ಕೆ ಪರಿಷ್ಕರಿಸಲು ಅನುಮೋದಿಸಲಾಗಿದೆ. ಈ ಬದಲಾವಣೆಯು ಪ್ರತಿ ವರ್ಷ 1792.71 ಕೋಟಿ ರೂಪಾಯಿಗಳ ವೆಚ್ಚವಾಗಲಿದೆ. ನಮ್ಮ ಉದ್ಯೋಗಿಗಳಿಗೆ ನಮ್ಮ ಸಮರ್ಪಣೆಯನ್ನು ಪುನರುಚ್ಚರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಯವರು ನಡವಳಿಯಲ್ಲಿ 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಿಸಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಇದು ಅನ್ವಯವಾಗಲಿದೆ. ಅಲ್ಲದೆ, ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಅರಳು ಹುರಿದಂತೆ ಪಟಪಟನೆ ಕನ್ನಡದಲ್ಲಿ ಮಾತನಾಡುವ ಜರ್ಮನಿ ಯುವತಿ...!

ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶ ಹೊರಡಿಸಲಾಗುತ್ತದೆ ಎಂದು ನಡವಳಿ ತಿಳಿಸಿದೆ.
ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರದ ಮುಂದೆ ಶೇ.4ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರವು ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ, ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಅದೇ ರೀತಿ ಕರ್ನಾಟಕದಲ್ಲೂ ತುಟ್ಟಿ ಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಶೇ. 4 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ನೌಕರರ ಸಂಘ ಪತ್ರ ಬರೆದು ಮನವಿ ಮಾಡಿತ್ತು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement