ಚೆನ್ನೈ/ ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ಜನರು ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿದ ಹೇಳಿಕೆ ವಿರುದ್ಧ ಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಅಲ್ಲದೆ, ತಮಿಳುನಾಡಿನ ಮಧುರೈ ನಗರ ಸೈಬರ್ ಕ್ರೈಂ ಪೊಲೀಸರೂ ಕೂಡಾ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿದ್ಧಾರೆ.
ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಕರಂದ್ಲಾಜೆ ಮಾದರಿ ನೀತಿ ಸಂಹಿತೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದೆ..
ತಮಿಳುನಾಡಿನ ತ್ಯಾಗರಾಜನ್ ಎಂಬುವರು ಶೋಭಾ ಕರಂದ್ಲಾಜೆ ಅವರ ವಿರುದ್ಧ ಮಧುರೈ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.
ತಮಿಳುನಾಡಿನವರು ಕರ್ನಾಟಕದಲ್ಲಿ ಬಾಂಬ್ ಇಟ್ಟಿದ್ದಾರೆ ಎಂಬ ಹೇಳಿಕೆಯ ನಂತರ ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ವಿವಿಧ ಗುಂಪುಗಳ ನಡುವೆ ‘ಹಗೆತನವನ್ನು ಬೆಳೆಸುತ್ತಿದ್ದಾರೆ’ ಎಂದು ಆರೋಪಿಸಿ ಮಧುರೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕರಂದ್ಲಾಜೆ ಕ್ಷಮೆಯಾಚನೆ….
ಬಿಜೆಪಿ ನಾಯಕಿ ತಮ್ಮೆ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ ಮತ್ತು ಹೇಳಿಕೆಯನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. `ನನ್ನ ತಮಿಳು ಸಹೋದರ ಸಹೋದರಿಯರಿಗೆ, ನಾನು ಘಟನೆ ಬಗ್ಗೆ ಬೆಳಕ ಚೆಲ್ಲಲು ಮಾತನಾಡಿದೆಮೇ ಹೊರತು ಕತ್ತಲನ್ನು ಬಿತ್ತರಿಸಲು ಅಲ್ಲ. ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದವರನ್ನು ಉದ್ದೇಶಿಸಿ ನಾನು ಹೇಳಿದ್ದೆ. ಆದರೂ ನನ್ನ ಟೀಕೆಗಳು ಕೆಲವರಿಗೆ ನೋವು ತಂದಿರುವುದನ್ನು ನಾನು ನೋಡುತ್ತೇನೆ. ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ.” ಎಂದು ಮತ್ತೊಂದು ಪೋಸ್ಚ್ ನಲ್ಲಿ ತಿಳಿಸಿದ್ದಾರೆ.
ಒಬ್ಬ ವ್ಯಕ್ತಿ ತಮಿಳುನಾಡಿನಿಂದ ಬಂದು ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಇಟ್ಟಿದ್ದಾನೆ. ಮತ್ತೊಬ್ಬ ದೆಹಲಿಯಿಂದ ಬಂದು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಾನೆ. ಇನ್ನೊಬ್ಬ ಕೇರಳದಿಂದ ಬಂದು ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚುತ್ತಾನೆ ಎಂದು ಕರಂದ್ಲಾಜೆ ಮಾತನಾಡುವಾಗ ಹೇಳಿದ್ದರು. ಇದು ವಿವಾದದ ಸ್ವರೂಪ ಪಡೆದುಕೊಂಡಿತ್ತು. ಇದಕ್ಕೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದರು. ಹಾಗೂ ದ್ವೇಷಪೂರಿತ ಭಾಷಣ ಮಾಡಿದ್ದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.
ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿತ್ತು. ಸದ್ಯ ಪ್ರಕರಣದ ತನಿಖೆಯನ್ನು ಎನ್‌ಐಎ ನಡೆಸುತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ