ಬೆಂಗಳೂರು : ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ..!
ಅವಧಿಗೆ ಮುಂಚೆಯೇ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಲೋಕಸಭಾ ಚುನಾವಣೆ (Lok Sabha Election 2024) ವೇಳೆ ಈ ಬೆಳವಣಿಗೆ ನಡೆದಿರುವುದರಿಂದ ಮಹತ್ವ ಪಡೆದಿದ್ದು, ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಜೂನ್ ವರೆಗೆ ಅವರ ಅವಧಿ ಇತ್ತು. ಆದರೆ, ಮೂರು ತಿಂಗಳ ಮುಂಚೆಯೇ ಅವರು ರಾಜೀನಾಮೆ ನೀಡಿದ್ದಾರೆ. ತೇಜಸ್ವಿನಿ ಗೌಡ ಅವರು ಬುಧವಾರ ಬೆಳಗ್ಗೆ ವಿಧಾನಸೌಧಕ್ಕೆ ಬಮದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ಅಂಗೀಕರಿಸಿದ್ದಾರೆ. ಅದರಲ್ಲಿ ತೇಜಸ್ವಿನಿಯವರು ತಾವು ಏಕೆ ರಾಜೀನಾಮೆ ನೀಡಿದ್ದೇನೆ ಎಂಬುದನ್ನು ಹೇಳಿಲ್ಲ.
ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು – ಕೊಡಗು ಕ್ಷೇತ್ರದ ಲೋಕಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಅದು ಕೈತಪ್ಪಿದ ಹಿನ್ನೆಲೆಯಲ್ಲಿ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮಗೆ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಅವರು ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ ಅವರಿಗೆ ಟಿಕೆಟ್ ನೀಡಿದ ನಂತರ ಅಸಮಾಧಾನಗೊಂಡಿದ್ದರು ಎನ್ನಲಾಗುತ್ತಿದೆ. ಅಲ್ಲದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸಿಗದಿದ್ದರೆ ಮೈಸೂರು-ಕೊಡಗು ಕ್ಷೇತ್ರಕ್ಕಾದರೂ ಟಿಕೆಟ್ ಸಿಗಬಹುದು ಎಂಬ ಲೆಕ್ಕಾಚಾರದಲ್ಲಿದ್ದರು. ಆ ಕ್ಷೇತ್ರಕ್ಕೆ ಯದಿವೀರ್ ಒಡೆಯವರ್ ಅವರಿಗೆ ಟಿಕೆಟ್ ನೀಡಲಾಯಿತು. ಹೀಗಾಗಿ ಅಸಮಾಧನಗೊಂಡ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ತಮ್ಮ ರಾಜೀನಾಮೆಗೆ ಯಾವುದೇ ಕಾರಣ ನೀಡದ ಅವರು ತಮಗೆ ಟಿಕೆಟ್ ಕೈತಪ್ಪಿದ್ದಕ್ಕೆ ಪ್ರತಿಭಟನಾರ್ಥವಾಗಿ ರಾಜೀನಾಮೆ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ಆದರೆ, ಅವರು ಶೀಘ್ರದಲ್ಲಿಯೇ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ