ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏ.20ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಎರಡು ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನೀಲಕುಮಾರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರ ಮತ್ತು ಕೋಲಾರ ಸೇರಿ ಚಿಕ್ಕಬಳ್ಳಾಪುರದಲ್ಲಿ ಸಭೆ, ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ. ಸುಮಾರು 2 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಬೆಂಗಳೂರು ಸಭೆಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದವರು ಪಾಲ್ಗೊಳ್ಳಲಿದ್ದಾರೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏ.23 ಮತ್ತು 24ರಂದು ರಾಜ್ಯ ಪ್ರವಾಸ ಮಾಡಲಿದ್ದು, ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. 23ರಂದು ಬೆಳಿಗ್ಗೆ ಯಶವಂತಪುರದಲ್ಲಿ ರೋಡ್ ಶೋ, ಬಳಿಕ ಯಲಹಂಕದಲ್ಲಿ ಸಾರ್ವಜನಿಕ ಸಭೆ, ಸಂಜೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯಲಿದೆ ಎಂದರು.
24ರಂದು ಬೆಳಿಗ್ಗೆ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ, ಮಧ್ಯಾಹ್ನ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ಹುಬ್ಬಳ್ಳಿ ರೋಡ್ ಶೋದಲ್ಲಿ ಪಾಲ್ಗೊಳ್ಳುವರು. 24ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ರಾಜ್ಯದ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ, ಮಧ್ಯಾಹ್ನ ಮಡಿಕೇರಿಯಲ್ಲಿ ಸಾರ್ವಜನಿಕ ಸಭೆ, ಸಂಜೆ ಉಡುಪಿಯ ಮಲ್ಪೆಯಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದರು.

ಪ್ರಮುಖ ಸುದ್ದಿ :-   ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾದ ಶಿವಮೂರ್ತಿ ಮುರುಘಾ ಶರಣರು

ಏಪ್ರಿಲ್‌ 21ರಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, 24ಕ್ಕೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದರು.
ಉತ್ತರ ಕರ್ನಾಟಕ ಕಾಂಗ್ರೆಸ್ ಅಭ್ಯರ್ಥಿ ಮಾತನಾಡುವ ಸಂದರ್ಭದಲ್ಲಿ ರಾಜ್ಯದ ಕೆಲವು ಭಾಗ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಹೇಳಿರುವುದು ಆಶ್ಚರ್ಯ ತಂದಿದೆ. ಕಾಂಗ್ರೆಸ್ ಇದೇ ಅಜೆಂಡಾದ ಮೇಲೆ ಕೆಲಸ ಮಾಡುತ್ತಿದೆಯಾ? ಎಂದು ವಾಗ್ದಾಳಿ ನಡೆಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement