ಗದಗ : ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಲಗಿದ್ದಾಗಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ನಗರದ ಚನ್ನಮ್ಮ ವೃತ್ತದ ಸಮೀಪ ಇರುವ ದಾಸರ ಓಣಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ ಬಾಕಳೆ (27), ಕೊಪ್ಪಳದ ಪರುಶುರಾಮ (55), ಲಕ್ಷ್ಮಿ (45) ಮತ್ತು ಪುತ್ರಿ ಆಕಾಂಕ್ಷಾ (17) ಎಂಬವರನ್ನು ಹತ್ಯೆ ಮಾಡಲಾಗಿದೆ. ಕೊಲೆ ಮಾಡಿದ್ದ ದುಷ್ಕರ್ಮಿಗಳು ಪರಾರಿಯಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಸುನಂದಾ ಬಾಕಳೆ ಪುತ್ರ ಕಾರ್ತಿಕ ಬಾಕಳೆ ಅವರ ಮದುವೆ ನಿಶ್ಚಯ ಕಾರ್ಯಕ್ರಮ ಇತ್ತು. ಅದಕ್ಕಾಗಿ ಸಂಬಂಧಿಗಳು ಏ. 17ರಂದು ಮನೆಗೆ ಬಂದಿದ್ದರು. ಗುರುವಾರ ( ಏ.18ರಂದು) ರಾತ್ರಿ ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದ್ದಾಗ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ನಾಲ್ಕೂ ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.ಬಾಗಿಲು ಶಬ್ದ ಕೇಳಿ ಅನುಮಾನಗೊಂಡು ಕುಟುಂಬಸ್ಥರು ತಕ್ಷಣವೇ ಪೊಲೀಸರಿಗೆ ಫೋನ್ ಮಾಡಿದ್ದರು. ಫೋನ್ ಮಾಡಿದ್ದು ಗೊತ್ತಾಗುತ್ತಿದ್ದಂತೆ ಆಗ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಎಸೆದು ಹೋಗಿರುವುದು ತನಿಖೆ ವೇಳೆ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದು, ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ಬಿಎಸ್ ನೇಮಗೌಡ, ಎಎಸ್ ಪಿ ಎಂ.ಬಿ.ಸಂಕದ, ಡಿವೈಎಸ್ ಪಿ ಇನಾಂದಾರ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶ್ವಾನದಳ, ಫೋರೆನ್ಸಿಕ್ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ.ಪಾಟೀಲ ಪಾಟೀಲ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ