ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ; ದಶಕಗಳ ಸಮಸ್ಯೆಗೆ ತೆರೆ

ಬೆಂಗಳೂರು : ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಎತ್ತಿ ಹಿಡಿದಿದೆ. ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸುಗಮ ಸಂಗೀತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ಧಾಟಿಯನ್ನು ಅಳವಡಿಸಿಕೊಂಡು ಅದರ ಪೂ‌ರ್ಣಪಾಠ ಬಳಸಬೇಕು ಹಾಗೂ ಆಲಾಪವಿಲ್ಲದೇ, ಪುನರಾವರ್ತನೆ ಇಲ್ಲದೆ 2 ನಿಮಿಷ 30 ಸೆಕೆಂಡುಗಳಲ್ಲಿ ಹಾಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ವಜಾಗೊಳಿಸಬೇಕು ಎಂದು ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಗಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರ ಏಕಸದಸ್ಯ ಪೀಠ ಬುಧವಾರ ಪ್ರಕಟಿಸಿತು.

ಕರ್ನಾಟಕ ಶಿಕ್ಷಣ ಕಾಯಿದೆ–1983ರ ಸೆಕ್ಷನ್‌ 3ರ ಪ್ರಕಾರ ಎಲ್ಲಾ ಶಾಲೆಗಳಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು, ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ತಮ್ಮ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡಬೇಕು ಎಂಬ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.
ಇಂತಹ ಆದೇಶ ಹೊರಡಿಸಲು ಸರ್ಕಾರಕ್ಕೆ ಯಾವುದೇ ಶಾಸನ ರೂಪಿಸುವ ಅವಶ್ಯಕತೆ ಇಲ್ಲ. ಸರ್ಕಾರಕ್ಕೆ ತನ್ನದೇ ಕಾರ್ಯಪಾಲನಾ ಆದೇಶ ಹೊರಡಿಸುವ ಅಧಿಕಾರವಿದೆ. ನಿರ್ದಿಷ್ಟ ರಾಗದಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿರುವುದರಿಂದ ಜನರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬ ಅರ್ಜಿದಾರರ ವಾದದಲ್ಲಿ ಹುರುಳಿಲ್ಲ. ರಾಷ್ಟ್ರಗೀತೆಯನ್ನು ಹೀಗೆಯೇ ಇಂತಿಷ್ಟೇ ಅವಧಿಯಲ್ಲಿ ಹಾಗೂ ಇಂಥದ್ದೇ ಧಾಟಿಯಲ್ಲಿ ಹಾಡಬೇಕು ಎಂಬ ನಿಯಮಾವಳಿಗಳು ನಾಡಗೀತೆಯ ವಿಷಯದಲ್ಲೂ ಅನ್ವಯವಾಗುತ್ತವೆ ಎಂದು ಪೀಠ ಹೇಳಿದೆ.

ಪ್ರಮುಖ ಸುದ್ದಿ :-   ಮೊಬೈಲ್ ನಲ್ಲಿ ಹುಡುಗರ ಜೊತೆ ಹರಟೆ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಕೊಡಲಿಯಿಂದ ಹೊಡೆದು ಕೊಂದ 14 ವರ್ಷದ ಬಾಲಕಿ...!

ಸರ್ಕಾರದ ಆದೇಶ ಪ್ರಶ್ನಿಸುವ ಯಾವುದೇ ಅಧಿಕಾರವನ್ನು ಅರ್ಜಿದಾರರು ಹೊಂದಿಲ್ಲ. ಅವರ ಮೂಲಭೂತ ಹಕ್ಕು ಉಲ್ಲಂಘನೆ ಆಗಿದೆ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಹೀಗಾಗಿ ಅರ್ಜಿ ವಜಾ ಮಾಡಲಾಗುತ್ತಿದೆ ಎಂದು ಪೀಠ ತೀರ್ಪಿನಲ್ಲಿ ತಿಳಿಸಿದೆ.
ಇಂತಹದೇ ಧಾಟಿಯಲ್ಲಿ ನಾಡಗೀತೆ ಹಾಡಬೇಕೆಂದು ಸರ್ಕಾರ ಸುಖಾಸುಮ್ಮನೆ ಆದೇಶ ಹೊರಡಿಸಿಲ್ಲ. ಧಾಟಿಯನ್ನು ಅಂತಿಮಗೊಳಿಸಲು ತಜ್ಞರ ಸಮಿತಿ ರಚನೆ ಮಾಡಿತ್ತು. ಸಮಿತಿ ವರದಿ ಆಧರಿಸಿ ಮೈಸೂರು ಅನಂತ ಸ್ವಾಮಿ ಅವರ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿದೆ ಎಂದು ನ್ಯಾಯಾಲಯ ಹೇಳಿದೆ.
ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ, ಮಧ್ಯಂತರ ಅರ್ಜಿದಾರ ಮೃತ್ಯುಂಜಯ ದೊಡ್ಡವಾಡ ಪರ ಹಿರಿಯ ವಕೀಲ ಸಿ ಎಚ್‌ ಹನುಮಂತರಾಯ ಹಾಗು ವಕಾಲತ್ತು ವಹಿಸಿದ್ದ ಎಸ್ ಸುನಿಲಕುಮಾರ ವಾದ ಮಂಡಿಸಿದ್ದರು. ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್ (ಎಎಜಿ) ಎಸ್ ಎ ಅಹಮದ್‌ ವಾದ ಮಂಡಿಸಿದ್ದರು.

ಜಯ ಭಾರತ ಜನನಿಯ ತನುಜಾತೆ, ನಾಡಗೀತೆಯನ್ನು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳಲ್ಲಿ ಹಾಡಬೇಕು ಎಂಬುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2022ರ ಸೆಪ್ಟೆಂಬರ್‌ 25ರಂದು ಹೊರಡಿಸಿದ ಆದೇಶವನ್ನು ಅರ್ಜಿದಾರರು ಪ್ರಶ್ನಿಸಿದ್ದರು.
ಅನಂತಸ್ವಾಮಿ ಅವರು ನಾಡಗೀತೆಯ ಕೇವಲ ಒಂದು ಪಲ್ಲವಿ ಮತ್ತು ಎರಡು ಚರಣಗಳಿಗೆ ಮಾತ್ರ ರಾಗ ಸಂಯೋಜಿಸಿದ್ದಾರೆ. ಗಾಯಕ ಮತ್ತು ಸಂಗೀತ ಸಂಯೋಜಕ ಸಿ.ಅಶ್ವತ್ಥ ಅವರು ನಾಡಗೀತೆಯ ಎಲ್ಲಾ ಚರಣಗಳಿಗೆ ರಾಗ ಸಂಯೋಜಿಸಿದ್ದಾರೆ. ಹಾಗಾಗಿ, ಸರ್ಕಾರದ ಆದೇಶ ರದ್ದುಪಡಿಸಬೇಕು ಮತ್ತು ಸಿ ಅಶ್ವತ್ಥ ರಾಗ ಸಂಯೋಜಿಸಿದ ಧಾಟಿಯಲ್ಲೇ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದರು.

ಪ್ರಮುಖ ಸುದ್ದಿ :-   26/11ರ ಮುಂಬೈ ಭಯೋತ್ಪಾಕ ದಾಳಿ: ಹೇಮಂತ್ ಕರ್ಕರೆ ಕೊಂದಿದ್ದು ಉಗ್ರ ಕಸಬ್‌ ಅಲ್ಲ, ಕೊಂದಿದ್ದು ಆರ್‌ ಎಸ್‌ ಎಸ್ ನಂಟಿನ ಪೊಲೀಸ್‌ ಅಧಿಕಾರಿ ; ಕಾಂಗ್ರೆಸ್​ ನಾಯಕನ ವಿವಾದಿತ ಹೇಳಿಕೆ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement