ಕೇಂದ್ರ ಮಾಜಿ ಸಚಿವ ಸಂಸದ ವಿ.ಶ್ರೀನಿವಾಸ ಪ್ರಸಾದ ನಿಧನ

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ (77) ನಿಧನರಾಗಿದ್ದಾರೆ.
ಮಧ್ಯರಾತ್ರಿ 1:20ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ ನಾಲ್ಕು ದಿನಗಳ ಹಿಂದೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಭಾನುವಾರ ಮಧ್ಯರಾತ್ರಿ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ.
ಅವರು ಪತ್ನಿ ಭಾಗ್ಯಲಕ್ಷ್ಮಿ ಪ್ರಸಾದ, ಪುತ್ರಿಯರಾದ ಪ್ರತಿಮಾ ಪ್ರಸಾದ, ಪೂರ್ಣಿಮಾ ಪ್ರಸಾದ, ಪೂನಂ ಪ್ರಸಾದ ಹಾಗೂ ಅಪಾರ ಬಂಧು-ಬಳಗ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.

ಅವರು ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರಾಗಿದ್ದ ಅವರು ಮೂಲತಃ ಮೈಸೂರಿನ ಅಶೋಕಪುರಂನವರು. ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಮೈಸೂರಿನ ಅಶೋಕಪುರಂನಲ್ಲಿ ಆಗಸ್ಟ್ 6, 1947 ರಂದು ಜನಿಸಿದ ಶ್ರೀನಿವಾಸ ಪ್ರಸಾದ ಎರಡು ಬಾರಿ ನಂಜನಗೂಡು ಕ್ಷೇತ್ರದಿಂದ ಶಾಸಕರಾಗಿಯೂ ಆಯ್ಕೆಯಾಗಿದ್ದರು.
ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಮತ್ತು ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಇಲಾಖೆ ಸಚಿವರಾಗಿದ್ದರು.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಎಚ್‌.ಡಿ. ರೇವಣ್ಣಗೆ ಜಾಮೀನು ಮಂಜೂರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement