41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

ಬೆಂಗಳೂರು ; ಪ್ರಸಕ್ತ ವರ್ಷ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲಿಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಇದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಆರೋಗ್ಯ ಇಲಾಖೆ ಬಿಸಿಲಿನಲ್ಲಿ ಕೆಲಸಗಳಿಂದ ದೂರವಿರುವಂತೆ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಈ ವರ್ಷದ ಗರಿಷ್ಠ 41.8 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಇದು ಬೆಂಗಳೂರಿನ ಇತಿಹಾಸದಲ್ಲಿ ದಾಖಲಾಗಿರುವ 3ನೇ ಗರಿಷ್ಠ ತಾಪಮಾನವಾಗಿದೆ.
ಮಂಗಳವಾರ ಕೆಂಗೇರಿಯಲ್ಲಿ ಗರಿಷ್ಠ ತಾಪಮಾನ 41.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನ ಬಿದರಹಳ್ಳಿಯಲ್ಲಿ 41.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ನೀಡಿದೆ,

ಐಎಂಡಿ ಪ್ರಕಾರ, ಬೆಂಗಳೂರು ಸಿಟಿ ವೀಕ್ಷಣಾಲಯದಲ್ಲಿ ಮಂಗಳವಾರ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ಮತ್ತು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಲಬುರಗಿಯಲ್ಲಿ ಗರಿಷ್ಠ 42.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ 40 ಡಿಗ್ರಿ ಸೆಲ್ಸಿಯಸ್, ಹೆಸರಘಟ್ಟ 40.1 ಡಿಗ್ರಿ ಸೆಲ್ಸಿಯಸ್, ಲಾಲ್ ಬಾಗ್ 40.5 ಡಿಗ್ರಿ ಸೆಲ್ಸಿಯಸ್, ಯಲಹಂಕದಲ್ಲಿ 40.8 ಡಿಗ್ರಿ ಸೆಲ್ಸಿಯಸ್ (ಮಧ್ಯಾಹ್ನ 3.30), ತಾವರೆಕೆರೆ 40.3 ಡಿಗ್ರಿ ಸೆಲ್ಸಿಯಸ್ ಮತ್ತು ಉತ್ತರಹಳ್ಳಿಯಲ್ಲಿ 40.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ ; ಪರಿಷತ್‌ ಸದಸ್ಯ ರವಿಕುಮಾರಗೆ ನಿರೀಕ್ಷಣಾ ಜಾಮೀನು

ಬೆಂಗಳೂರಿನಲ್ಲಿ ಸರಾಸರಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿರುವ ಸಾಧ್ಯತೆ ಇದೆ. ತಾಪಮಾನ ಏರಿಕೆಯಲ್ಲಿ ಆಯಾ ಸ್ಥಳಗಳಲ್ಲಿ ಸ್ಥಳೀಯ ಅಂಶಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ತಿಳಿಸಿದ್ದಾರೆ.
ಈ ನಡವೆ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮೇ 5 ಮತ್ತು 6 ರಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಬೀದರ, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ) ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 5 ರವರೆಗೆ ಬಿಸಿಗಾಳಿ ಎಚ್ಚರಿಕೆ ಮುನ್ಸೂಚನೆ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement