ನರೇಂದ್ರ ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಲೋಕಸಭಾ ಚುನಾವಣೆ ಪ್ರಚಾರದ ವೇಳೆ ದೇವರು ಮತ್ತು ಪೂಜಾ ಸ್ಥಳದ ಹೆಸರಿನಲ್ಲಿ ಮತ ಯಾಚಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿರುವ ಆರೋಪದಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತಿರಸ್ಕರಿಸಿದೆ [ಫಾತಿಮಾ ಮತ್ತು ಭಾರತೀಯ ಚುನಾವಣಾ ಆಯೋಗ ಇನ್ನಿತರರ ನಡುವಣ ಪ್ರಕರಣ].
ದೂರನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡುವಂತೆ ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು ಸತೀಶಚಂದ್ರ ಶರ್ಮಾ ಅವರಿದ್ದ ಪೀಠ ಸೂಚಿಸಿತು.

“ನೀವು ಸಕ್ಷಮ ಪ್ರಾಧಿಕಾರಿಗಳನ್ನು ಸಂಪರ್ಕಿಸಿದ್ದೀರಾ. ಅರ್ಜಿ ಸಲ್ಲಿಸುವ ಮುನ್ನ ನೀವು ಸಕ್ಷಮ ಪ್ರಾಧಿಕಾರಿಗಳನ್ನು ಸಂಪರ್ಕಿಸಬೇಕು” ಎಂದು ನ್ಯಾಯಾಲಯ ಹೇಳಿತು. ಬಳಿಕ ಅರ್ಜಿದಾರರು ಮನವಿ ಹಿಂಪಡೆಯಲು ನಿರ್ಧರಿಸಿದರು.
ಧರ್ಮದ ಹೆಸರಿನಲ್ಲಿ ಮತ ಕೇಳುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೋದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಫಾತಿಮಾ ಎಂಬಾಕೆ ಮನವಿ ಮಾಡಿದ್ದರು.”ಹಿಂದೂ ದೇವತೆಗಳು ಮತ್ತು ಹಿಂದೂ ಪೂಜಾ ಸ್ಥಳ” ಹೆಸರಿನಲ್ಲಿ ಬಿಜೆಪಿಗೆ ಮತ ನೀಡುವಂತೆ ಪ್ರಧಾನಿ ಮೋದಿ ಮತದಾರರಲ್ಲಿ ಮನವಿ ಮಾಡಿದ್ದರು ಎಂದು ಮನವಿಯಲ್ಲಿ ತಿಳಿಸಲಾಗಿತ್ತು. ವಕೀಲ ಆನಂದ ಎಸ್ ಜೊಂಧಲೆ ಅವರು ಸಲ್ಲಿಸಿದ್ದ ಇದೇ ಬಗೆಯ ಮನವಿಯನ್ನು ದೆಹಲಿ ಹೈಕೋರ್ಟ್‌ ಕೂಡ ಈಚೆಗೆ ತಿರಸ್ಕರಿಸಿತ್ತು.

ಪ್ರಮುಖ ಸುದ್ದಿ :-   ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ : ಬಿಜೆಪಿಯಿಂದ ಭೋಜಪುರಿ ನಟನ ಉಚ್ಛಾಟನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement