ಬೆಂಗಳೂರು : ಹಾಸನ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಕೋರಿದ್ದ ಅರ್ಜಿಯ ತುರ್ತು ವಿಚಾರಣೆಗೆ ಹೈಕೋರ್ಟ್ ಮಂಗಳವಾರ ನಿರಾಕರಿಸಿದ್ದು, ಬೇಸಿಗೆ ರಜೆ ಬಳಿಕ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸೂಚಿಸಿದೆ.
ಬೆಂಗಳೂರಿನ ರಾಷ್ಟ್ರ ಸಮಿತಿ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ರಜಾಕಾಲೀನ ಏಕಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರು ವಿಚಾರಣೆ ನಡೆಸಿದರು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಜಿ.ಆರ್. ಮೋಹನ ಅವರು “ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ಹಲವು ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹಾಗೂ ಸಾಕ್ಷ್ಯ ನಾಶ ಮಾಡಲಾಗುತ್ತಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವತಂತ್ರ ತನಿಖಾ ಸಂಸ್ಥೆಯಿಂದ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು” ಎಂದು ಮನವಿ ಮಾಡಿದರು.
ಆಗ ಪೀಠವು ಪೀಠವು ಎಸ್‌ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ಪ್ರಕರಣದ ತುರ್ತು ವಿಚಾರಣೆ ನಡೆಸುವ ಅಗತ್ಯ ಇಲ್ಲ. ಬೇಸಿಗೆ ರಜೆ ಬಳಿಕ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಬೇಕು” ಎಂದು ಹೇಳಿ ವಿಚಾರಣೆ ಮುಂದೂಡಿತು.
ಪ್ರಕರಣದಲ್ಲಿ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಎಸ್‌ಐಟಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಬಿಜೆಪಿ ಮುಖಂಡ ಹಾಗೂ ವಕೀಲ ಜಿ ದೇವರಾಜೇಗೌಡರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.
ಪ್ರಕರಣದ ಹಿನ್ನೆಲೆ: ಲೈಂಗಿಕ ಹಗರಣದಲ್ಲಿ ಭಾಗಿಯಾದ ಆರೋಪದಲ್ಲಿ ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ದೂರು ನೀಡಿತ್ತು. ಈಗಾಗಲೇ ದೂರು ದಾಖಲಾಗಿದ್ದು, ಹೀಗಾಗಿ ಮತ್ತೊಂದು ದೂರು ದಾಖಲಿಸಿಕೊಳ್ಳುವುದಿಲ್ಲ ಎಂದು ಹಿಂಬರಹ ನೀಡಲಾಗಿತ್ತು.
ಹೊಳೆನರಸೀಪುರ ಠಾಣೆಯ ಪೊಲೀಸರು ನೀಡಿರುವ ಹಿಂಬರಹವನ್ನು ವಜಾ ಮಾಡಬೇಕು. ಗೃಹ ಇಲಾಖೆ, ಪೊಲೀಸ್ ಮಹಾನಿರ್ದೇಶಕರು, ಎಸ್‌ಐಟಿ ಮತ್ತು ಹೊಳೆನರಸೀಪುರ ಪೊಲೀಸರ ಮೂಲಕ ಏಪ್ರಿಲ್ 27ರಂದು ನೀಡಿರುವ ದೂರಿನ ಅನ್ವಯ ಸ್ವತಂತ್ರ ಸಂಸ್ಥೆಯ ಮೂಲಕ ಗಂಭೀರವಾಗಿ ತನಿಖೆ ನಡೆಸಲು ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ರಾಷ್ಟ್ರ ಸಮಿತಿ ಅರ್ಜಿ ಸಲ್ಲಿಸಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ