ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆ ಭಾನುವಾರ(ಮೇ 19)ದಿಂದ ಐದು ದಿನ 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದ ಜಿಲ್ಲೆಗಳಿಗೆ ಜೋರಾಗಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಹಾಗೂ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ ಉತ್ತರ ಕರ್ನಾಟಕ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ (Bay Of Bengal) ವಾಯುಭಾರ ಕುಸಿತದಿಂದಾಗಿ ಕರಾವಳಿಯಲ್ಲಿ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಮತ್ತು ಮೀನುಗಾರಿಕಾ ಇಲಾಖೆ ಐದು ದಿನಗಳ ಕಾಲ ಮೀನುಗಾರಿಕೆಗೆ ಆಳ ಸಮುದ್ರಕ್ಕೆ ತೆರಳದಂತೆ ನಿಷೇಧ ಹೇರಿದೆ.
ಜೂನ್ 1ರ ವೇಳೆಗೆ ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೂ ಜೂನ್ 15ರ ವೇಳೆಗೆ ದೇಶಾದ್ಯಂತ ಮುಂಗಾರು ವ್ಯಾಪಿಸಲಿದೆ ಎಂದು ಹೇಳಿದೆ.


ನಿಮ್ಮ ಕಾಮೆಂಟ್ ಬರೆಯಿರಿ