ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಪೊಲೀಸರಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಕ್ರಮ ಕಲ್ಲು ಕ್ವಾರಿ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ ಶೆಟ್ಟಿ ಅವರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಗೆ ಬಂದು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ ಒತ್ತಡ ಹಾಕಿ ಕರ್ತವ್ಯಕ್ಕೆ ಅಡ್ಡಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಶಾಸಕರು, ತಮ್ಮ ಪಕ್ಷದ ಕಾರ್ಯಕರ್ತನಾದ ಶಶಿರಾಜ ಶೆಟ್ಟಿಯನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಆರೋಪಿಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಬೈದು ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಕ್ರಮ ಕಲ್ಲುಗಣಿಕಾರಿಕೆ ನಡೆಸುತ್ತಿದ್ದ ಎಂಬ ಆರೋಪದ ಮೇಲೆ ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲಿನ ಕೋರೆಗೆ ತಹಶೀಲ್ದಾರ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತ್ತು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ ಶೆಟ್ಟಿಯನ್ನು ಬಂಧಿಸಲಾಗಿತ್ತು. ಈ ಬಗ್ಗೆ ಮಾಹಿತಿ ಗೊತ್ತಾದ ನಂತರ ಶಾಸಕ ಹರೀಶ ಪೂಂಜ ಹಾಗೂ ಬಿಜೆಪಿ ಕಾರ್ಯಕರ್ತರು ಬೆಳ್ತಂಗಡಿ ಠಾಣೆಯೆದುರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಕರಣದಲ್ಲಿ ಅಮಾಯಕನ ಬಂಧನವಾಗಿದ್ದು, ಕೂಡಲೇ ಆತನನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡರು. ಬೆಳ್ತಂಗಡಿ ಠಾಣೆಯಲ್ಲಿ ಐಪಿಸಿ ಕಲಂ 353,504ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದು ಬೆಳ್ಳಿ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement