ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸೋಮವಾರ ಜಾಮೀನು ನೀಡಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ನಲ್ಲಿ ಮೊದಲನೇ ಆರೋಪಿಯಾಗಿರುವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರಾದ ಜೆ. ಪ್ರೀತ್ ಪುರಸ್ಕರಿಸಿದ್ದು, ಐದು ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರ ಭದ್ರತೆ ನೀಡುವುದು, ತನಿಖಾಧಿಕಾರಿಗೆ ಸಹಕರಿಸುವುದು ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ ಹಾಗೂ ಪ್ರಾಸಿಕ್ಯೂಷನ್ ಪರವಾಗಿ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ ನಾಯ್ಕ್ ಮತ್ತು ಜಯ್ನಾ ಕೊಠಾರಿ ವಾದಿಸಿದರು.
ಸಂತ್ರಸ್ತೆಯ ದೂರು ಆಧರಿಸಿ ಐಪಿಸಿ ಸೆಕ್ಷನ್ ಪ್ರಕರಣ 354ಎ, 354ಡಿ, 506, 509ರ ಅಡಿ ಪ್ರಕರಣ ದಾಖಲಿಸಲಾಗಿದ್ದು, ರೇವಣ್ಣ ಅವರನ್ನು ಮೊದಲನೇ ಆರೋಪಿ ಹಾಗೂ ಪ್ರಜ್ವಲ್ ರೇವಣ್ಣ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.
ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಇತ್ತೀಚಿಗೆ ಷರತ್ತುಬದ್ಧ ಜಾಮೀನು ನೀಡಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ