ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಭೋಜಪುರಿ ನಟ ಮತ್ತು ಗಾಯಕ ಪವನ್ ಸಿಂಗ್ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಪಕ್ಷದಿಂದ ಬುಧವಾರ ಉಚ್ಛಾಟಿಸಿದೆ.
ಈ ಹಿಂದೆ ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಆದರೆ ಅವರು ಅಸನ್ಸೋಲ್ ಕ್ಷೇತ್ರದಲ್ಲಿ ಸ್ಪರ್ಧಿಸುವುದರಿಂದ ಹಿಂದೆ ಸರಿದಿದ್ದರು. ಈಗ ಬಿಹಾರದ ಕರಕತ್ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ರಾಷ್ಟ್ರೀಯ ಲೋಕ ಮೋರ್ಚಾದ ಮುಖ್ಯಸ್ಥರಾಗಿರುವ ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಅವರು ಈ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
“ನೀವು ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುತ್ತಿದ್ದೀರಿ. ಇದು ಪಕ್ಷದ ವಿರುದ್ಧವಾಗಿದೆ ಮತ್ತು ಪಕ್ಷದ ಪ್ರತಿಷ್ಠೆಗೆ ಕಳಂಕ ತಂದಿದೆ ಮತ್ತು ಪಕ್ಷದ ಶಿಸ್ತನ್ನು ಉಲ್ಲಂಘಿಸಿದೆ” ಎಂದು ಬಿಜೆಪಿಯ ಬಿಹಾರ ಘಟಕವು ಪವನ ಸಿಂಗ್‌ಗೆ ಬರೆದ ಪತ್ರದಲ್ಲಿ ತಿಳಿಸಿದೆ. “ನಿಮ್ಮನ್ನು ಉಚ್ಛಾಟನೆ ಮಾಡುವ ನಿರ್ಧಾರವನ್ನು ಬಿಹಾರ ಬಿಜೆಪಿ ಅಧ್ಯಕ್ಷ ಸಾಮ್ರಾಟ್ ಚೌಧರಿ ತೆಗೆದುಕೊಂಡಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.
ವಿಶೇಷವೆಂದರೆ ಪವನ ಸಿಂಗ್ ಅವರ ತಾಯಿ, ಪ್ರತಿಮಾ ಸಿಂಗ್ ಕೂಡ ಅದೇ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪ್ರಸಕ್ತ ಲೋಕಸಭೆ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದಲ್ಲಿ ಜೂನ್ 1 ರಂದು ಕರಕಟ್ ಕ್ಷೇತ್ರಕ್ಕೆ ಮತದಾನ ನಡೆಯಲಿದೆ.
ನಿಮ್ಮ ಕಾಮೆಂಟ್ ಬರೆಯಿರಿ