ಸಂತ್ರಸ್ತೆ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಭವಾನಿ ರೇವಣ್ಣಗೆ ಬಂಧನದ ಭೀತಿ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರಿಗೂ ಬಂಧನದ ಭೀತಿ ಎದುರಾಗಿದೆ.
ವಿಶೇಷ ತನಿಖಾ ದಳದಿಂದ ಬಂಧನ ಭೀತಿ ಎದುರಿಸುತ್ತಿರುವುದರಿಂದ ನಿರೀಕ್ಷಣಾ ಜಾಮೀನುಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮೇ 29ರಂದು ಪೂರ್ಣಗೊಳಿಸಿದ್ದ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್‌ ಅವರು ಆದೇಶ ಕಾಯ್ದಿರಿಸಿದ್ದರು. ಅವರು ಇಂದು, ಶುಕ್ರವಾರ ಪ್ರಕಟಿಸಿದರು.
ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ ಅವರು “ಪ್ರಕರಣದ ಅನೇಕ ಆರೋಪಿಗಳ ಜೊತೆ ಭವಾನಿ ಫೋನ್‌ ಸಂಭಾಷಣೆ ನಡೆಸಿರುವುದು ತನಿಖೆ ವೇಳೆ ಕಂಡುಬಂದಿದೆ ಎಂದು ವಾದಿಸಿದ್ದರು.

ಭವಾನಿ ಪರ ವಾದಿಸಿದ್ದ ಹಿರಿಯ ವಕೀಲ ಸಂದೇಶ್‌ ಚೌಟ ಅವರು “ಭವಾನಿ ವಿರುದ್ಧದ ಆರೋಪಗಳು ರಾಜಕೀಯ ಷಡ್ಯಂತ್ರದಿಂದ ಕೂಡಿವೆ. ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಇಲ್ಲ. ಆರೋಪಿಯು ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆ. ಆದ್ದರಿಂದ, ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದ್ದರು.
ಪ್ರಜ್ವಲ್‌ ಮತ್ತು ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಮಾಧ್ಯಮಗಳು ಬಿಂಬಿಸಿವೆ. ಎಸ್‌ಐಟಿಯು ಮಾಧ್ಯಮಗಳು ಬಿಂಬಿಸಿದಂತೆ ಯಾವುದೇ ತೆರನಾದ ನೋಟಿಸ್‌ ಜಾರಿ ಮಾಡಿಲ್ಲ. ಮಾಧ್ಯಮಗಳ ವರದಿಯಿಂದ ತನಿಖಾ ಸಂಸ್ಥೆಯು ಬಂಧಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರುತ್ತಿರುವುದಾಗಿ ಭವಾನಿ ಪರ ವಕೀಲರು ವಿಚಾರಣೆಯ ವೇಳೆ ವಾದಿಸಿದ್ದರು.
ಸಂತ್ರಸ್ತ ಮಹಿಳೆ ಅಪಹರಣದ ಆರೋಪ ಮೇಲೆ ಕೆ ಆರ್‌ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 364ಎ, 365 ಮತ್ತು 34ರ ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಇದರಲ್ಲಿ ಭವಾನಿ ಪತಿ ಎಚ್‌ ಡಿ ರೇವಣ್ಣ ಮೊದಲ ಆರೋಪಿಯಾಗಿದ್ದು, ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement