ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ಬಿಜೆಪಿ 17, ಜೆಡಿಎಸ್‌ 2, ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಗೆಲುವು ; ರಾಜ್ಯದಲ್ಲೇ ಅತಿ ಹೆಚ್ಚು ಅಂತರದಲ್ಲಿ ಗೆದ್ದ ಕಾಗೇರಿ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಅಥವಾ ಮುಂದಿದೆ. ರಾಜ್ಯದಲ್ಲಿ ಬಿಜೆಪಿ 17, ಜೆಡಿಎಸ್‌ 2, ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಜಯಗಳಿಸಿದೆ ಅಥವಾ ಮುಂದಿದೆ.
ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ, ಮೈಸೂರು, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಹಾವೇರಿ-ಗದಗ, ಧಾರವಾಡ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್‌ ಅಭ್ಯರ್ಥಿಗಳು ಕೋಲಾರ ಹಾಗೂ ಮಂಡ್ಯ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗಳು ಚಾಮರಾಜ ನಗರ, ಹಾಸನ್‌, ದಾವಣೆಗೆರೆ, ಚಿಕ್ಕೋಡಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಕಲಬುರಗಿ ಹಾಗೂ ಬೀದರ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.
ಉತ್ತರಕನ್ನಡ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರು ಜಯಗಳಿಸಿದ್ದಾರೆ. ಅವರು ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಮತ ಎಣಿಕೆಯ ಆರಂಭಿಕ ಸುತ್ತಿನಿಂದಲೂ ಕಾಗೇರಿ ಮುನ್ನಡೆ ಕಾಯ್ದುಕೊಂಡಿದ್ದರು. ಕೊನೆಯ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಗೇರಿಯವರು ಗೆಲುವಿನ ನಗೆ ಬೀರಿದ್ದಾರೆ. ಕಾಗೇರಿ 7,76,968 ಇವಿಎಂ ಮತ, 3,526 ಪೋಸ್ಟಲ್ ಮತ ಸೇರಿ 7,80,494 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ನಿಂಬಾಳ್ಕರ್ ಅವರು 4,42,622 ಮತಗಳನ್ನು ಪಡೆದಿದ್ದಾರೆ. ಕಾಗೇರಿ 3,37,872 ಮತಗಳ ಅಂತರದಿಂದ ಅಭೂತಪೂರ್ವ ಗೆಲುವು ತನ್ನದಾಗಿಸಿಕೊಂಡಿದ್ದಾರೆ. 10,139 ನೋಟಾ ಮತಗಳು ದಾಖಲಾಗಿವೆ.

ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ 4 ಲಕ್ಷಕ್ಕೂ ಅಧಿಕ ಮತ ಪಡೆದು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರನ್ನು ಸೋಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 4,24,408 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 2,62,522 ಮತಗಳನ್ನು ಪಡೆದರು. ಶ್ರೀನಿವಾಸ ಪೂಜಾರಿ 1,61,886 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹೊಸ ಮುಖ ವಿನೋದ ಅಸೂಟಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಭರ್ಜರಿ 94,822 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಪ್ರಹ್ಲಾದ ಜೋಶಿ 7,05, 830 ಮತಗಳನ್ನು ಪಡೆದರೆ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ 6,11,008 ಮತಗಳನ್ನು ಪಡೆದಿದ್ದಾರೆ.
ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್‌ ಹಗರಣದಿಂದಾಗಿ ಹೆಚ್ಚು ಗಮನ ಸೆಳೆದಿದ್ದ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಪ್ರಜ್ವಲ್​ ರೇವಣ್ಣ ಅವರು ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ 43,739 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. 20 ವರ್ಷದ ಬಳಿಕ ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣನ ಸೋಲಿಸುವ ಮೂಲಕ ಇತಿಹಾಸ ಮರುಕಳಿಸುವಂತೆ ಮಾಡಿದ್ದಾರೆ. 1999ರಲ್ಲಿ ಪುಟ್ಟಸ್ವಾಮಿಗೌಡರು ದೇವೇಗೌಡರನ್ನು ಸೋಲಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಎಂ. ಶ್ರೇಯಸ್ ಪಟೇಲ್ – 6,70,274 ಮತಗಳನ್ನು ಪಡೆದರೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಪ್ರಜ್ವಲ್‌ ರೇವಣ್ಣ – 6,26,536 ಮತಗಳನ್ನು ಪಡೆದಿದ್ದಾರೆ.

ಬೀದರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಅವರು ಕೇಂದ್ರ ಸಚಿವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೊದಲ ಸ್ಪರ್ಧೆಯಲ್ಲೇ 1,29,396 ಮತಗಳ ಅಂತರದಿಂದ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸೋಲಿಸಿದ್ದಾರೆ. ಕಾಂಗ್ರೆಸ್ ಸಾಗರ ಖಂಡ್ರೆ 6,65,162 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರು 5,35,766 ಮತಗಳನ್ನು ಪಡೆದಿದ್ದಾರೆ. ಈ ಬಾರಿಯ ಈ ಲೋಕಸಭಾ ಚುನಾವಣೆಯಲ್ಲಿ ಸಾಗರ್​ ಖಂಡ್ರೆ ದೇಶದ ಅತಿ ಕಿರಿಯ ವಯಸ್ಸಿನ(26 ವರ್ಷ) ಅಭ್ಯರ್ಥಿಯಾಗಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ್​ ಕಾರಜೋಳ 6,84,890 ಮತ ಗಳಿಸಿ ಕಾಂಗ್ರೆಸ್ ಅಭ್ಯರ್ಥಿ ​ಬಿ.ಎನ್​. ಚಂದ್ರಪ್ಪ ಅವರನ್ನು 48,121 ಮತಗಳ ಅಂತರದಿಂದ ಸೋಲಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯವರಾದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 6,84,890 ಮತಗಳನ್ನು ಪಡೆದರೆ ಕಾಂಗ್ರೆಸ್‌ ಅಭ್ಯರ್ಥಿ 636769 ಮತಗಳನ್ನು ಪಡೆದಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಅವರು ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ವಿರುದ್ಧ 87,629 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಪ್ರಮುಖ ಸುದ್ದಿ :-   ಏಷ್ಯಾದ ಕೆಲವು ದೇಶಗಳಲ್ಲಿ ಕೋವಿಡ್-19 ಸೋಂಕು ಮತ್ತೆ ಹೆಚ್ಚಳ ; JN.1 ರೂಪಾಂತರ ಎಷ್ಟು ಅಪಾಯಕಾರಿ..?

ಬಿಜೆಪಿ ಅಭ್ಯರ್ಥಿ ಯದುವೀರ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ (Yaduveer Krishnadatta Chamaraja Wadiyar) ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಇದರಿಂದ ತವರಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖಭಂಗವಾಗಿದೆ. ಬಿಜೆಪಿ ಅಭ್ಯರ್ಥಿ ಯದುವೀರ ಅವರು 7,90,391 ಮತಗಳನ್ನು ಪಡೆದರೆ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ ಅವರು 6,53,739 ಮತಗಳನ್ನು ಪಡೆದಿದ್ದಾರೆ. ಆ ಮೂಲಕ 1,36,652 ಮತಗಳ ಅಂತರದಲ್ಲಿ ಯದುವೀರ್‌ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮಲ್ಲೇಶ್‌ ಬಾಬು 70 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಮಲ್ಲೇಶ್‌ ಬಾಬು 6,87,722 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಕೆ.ವಿ ಗೌತಮ್​ ಸೋಲು ಅನುಭವಿಸಿದ್ದಾರೆ.
ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮಲ್ಲೇಶ ಬಾಬು ಅವರು ಕಾಂಗ್ರೆಸ್‌ ಅಭ್ಯರ್ಥಿ ಕೆ.ವಿ.ಗೌತಮ ಅವರು 70ಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ. ಮಲ್ಲೇಶ ಬಾಬು ಅವರು 6,87,722 ಮತಗಳನ್ನು ಪಡೆದರೆ ಕಾಂಗ್ರೆಸ್‌ ಅಭ್ಯರ್ಥಿ ಕೆ.ವಿ. ಗೌತಮ ಅವರು 6,17,413 ಮತಗಳನ್ನು ಪಡೆದರು. ಮಲ್ಲೇಶ ಬಾಬು ಅವರು 70,309 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಜೇಶ್‌ ಚೌಟ ಅವರು ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಜೇಶ್‌ ಚೌಟ ಅವರು 7,40,702 ಮತಗಳನ್ನು ಪಡೆದರೆ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ ಆರ್‌ ಅವರು 5,96,412 ಮತಗಳನ್ನು ಪಡೆದರು. ಕ್ಯಾಪ್ಟನ್‌ ಬ್ರಜೇಶ್‌ ಚೌಟ 1,44,290 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ 1,75,574 ಮತಗಳ ಅಂತರದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಪುತ್ರ ಮೃಣಾಲ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜಗದೀಶ ಶೆಟ್ಟರ 7,56,471 ಮತಗಳನ್ನು ಪಡೆದರೆ, ಮೃಣಾಲ್ ಹೆಬ್ಬಾಳ್ಕರ 5,80,897 ಮತಗಳನ್ನು ಪಡೆದರು.
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕೆ.ರಾಜಶೇಖರ ಹಿಟ್ನಾಳ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಡಾ.ಕೆ ಬಸವರಾಜ ಅವರನ್ನು 45 ಸಾವಿರ ಮತಗಳ ಅಂತರದಿಂದ ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿಎನ್. ಮಂಜುನಾಥ​ ಕಾಂಗ್ರೆಸ್​ಸಿನ ಡಿ.ಕೆ. ಸುರೇಶ​ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಡಾ.ಸಿ.ಎನ್. ಮಂಜುನಾಥ​ 8,82,186 ಮತಗಳನ್ನು ಪಡೆದಿದ್ದು, ಡಿ.ಕೆ. ಸುರೇಶ 6,82,207 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಡಾ.ಸಿ.ಎನ್. ಮಂಜುನಾಥ್​ 1,99,979 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನವಣಾ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ಹಾಲಿ ಸಂಸದ ಬಿವೈ ರಾಘವೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ಒಟ್ಟು 7,54,380 ಮತಗಳನ್ನು ಪಡೆದರೆ ಅವರ ಸಮೀಪದ ಪ್ರತಿ ಸ್ಪರ್ಧಿ ಗೀತಾ ಶಿವರಾಜಕುಮಾರ 5,22,674 ಮತಗಳನ್ನು ಪಡೆದಿದ್ದಾರೆ. ರಾಘವೇಂದ್ರ 2,31,706 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು 29,123 ಮತಗಳನ್ನು ಮಾತ್ರ ಪಡೆಯಲು ಶಕ್ತರಾಗಿದ್ದಾರೆ. ಅವರು ಠೇವಣಿ ಕಳೆದುಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಲ್ ಸೋಫಿಯಾ ಬಗ್ಗೆ ಸಚಿವ ವಿಜಯ ಶಾ ಹೇಳಿಕೆ | ಎಸ್ಐಟಿ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ ; ಬಂಧನಕ್ಕೆ ತಡೆ

ಮಂಡ್ಯ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರು 2,84,620 ಮತಗಳಿಂದ ಸ್ಟಾರ್‌ ಚಂದ್ರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕುಮಾರಸ್ವಾಮಿ 8,51,881 ಮತಗಳನ್ನು ಪಡೆದರೆ ಸ್ಟಾರ್‌ ಚಂದ್ರು ಅವರು 5,67,261 ಮತಗಳನ್ನು ಪಡೆದಿದ್ದಾರೆ.
ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರವಾದ ವಿಜಯಪುರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಜಯ ಗಳಿಸಿದ್ದಾರೆ. ಕಾಂಗ್ರೆಸ್ ಪಕ್ಷ​ದ ಅಭ್ಯರ್ಥಿ ರಾಜು ಆಲಗೂರ ಅವರ ವಿರುದ್ಧ ಬಿಜೆಪಿಯಿಂದ ರಮೇಶ ಜಿಗಜಿಣಗಿ ಗೆಲುವು ದಾಖಲಿಸಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್​ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಮನ್ಸೂರ್​ ಅಲಿ ಖಾನ್​ ಅವರಿಗೆ ಸೋಲಾಗಿದೆ. ಸತತ ಹಿನ್ನಡೆಯಲ್ಲಿದ್ದ ಪಿ.ಸಿ.ಮೋಹನ್​ ಕೊನೆಯ ಸುತ್ತುಗಳಲ್ಲಿ ಮುನ್ನಡೆ ಕಂಡು ನಲವತ್ತು ಸಾವಿರಕ್ಕೂ ಅಧಿಕ ಅಂತರಗಳಿಂದ ವಿಜಯ ಸಾಧಿಸಿದ್ದಾರೆ. ಪಿ. ಸಿ ಮೋಹನ್​ 658915 ಮತಗಳನ್ನು ಪಡೆದರೆ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಮನ್ಸೂರ್ ಅಲಿ ಖಾನ್​ 626208 ಮತಗಳನ್ನು ಪಡೆದಿದ್ದಾರೆ. ಪಿ.ಸಿ.ಮೋಹನ 32707 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಬಿಸಿಲ ನಾಡು ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 2019ರ ಲೋಕಸಭೆ ಚುನಾವಣೆ (Kalaburagi Election Result 2024) ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. ಕಲಬುರಗಿಯಲ್ಲಿ ಬಿಜೆಪಿಯ ಉಮೇಶ ಜಾಧವ (Umesh Jadhav) ಅವರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಗೆಲುವು ಸಾಧಿಸಿದ್ದಾರೆ.

ಚಾಮರಾಜನಗರ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಪುತ್ರ ಸುನಿಲ ಬೋಸ್‌ ಚಾಮರಾಜನಗರ ಕ್ಷೇತ್ರದಲ್ಲಿ ಚೊಚ್ಚಲ ಗೆಲುವು ದಾಖಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಎಸ್‌.ಬಾಲರಾಜ್‌ ವಿರುದ್ಧ 1.19 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸುನಿಲ್‌ ಬೋಸ್‌ (Sunil Bose) ಗೆದ್ದಿದ್ದಾರೆ.
ಕ್ಷೇತ್ರದಲ್ಲಿ 4 ಲಕ್ಷಕ್ಕೂ ಅಧಿಕ ಮತಗಳನ್ನು ಗಳಿಸುವ ಮೂಲಕ ಕಾಂಗ್ರೆಸ್​ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್​ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್, ​ಪಕ್ಷೇತರ ಅಭ್ಯರ್ಥಿ ​ಜಿ.ಬಿ. ವಿನಯ್​ ಕುಮಾರ್​ ಸೋಲನುಭವಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಡಾ.ಕೆ.ಸುಧಾಕರ್ ಭರ್ಜರಿ ಗೆಲುವು ಕಂಡಿದ್ದಾರೆ. ಕಾಂಗ್ರೆಸ್​ ರಕ್ಷಾ ರಾಮಯ್ಯ ವಿರುದ್ಧ 1,63,460 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ 8,22,619 ಮತಗಳನ್ನು ಪಡೆದರೆ ಕಾಂಗ್ರೆಸ್​ ಅಭ್ಯರ್ಥಿ ರಕ್ಷಾ ರಾಮಯ್ಯ 6,59,159 ಮತಗಳನ್ನು ಪಡೆದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಕಣಕ್ಕಿಳಿದಿರುವ ತೇಜಸ್ವಿ ಸೂರ್ಯ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಸೌಮ್ಯ ರೆಡ್ಡಿ ಪರಾಜಯಗೊಂಡಿದ್ದಾರೆ. ತೇಜಸ್ವಿ ಸೂರ್ಯ ಅವರು 7,27,537 ಮತಗಳು ಹಾಗೂ ಸೌಮ್ಯ ರೆಡ್ಡಿ 4,59,460 ಮತಗಳನ್ನು ಪಡೆದಿದ್ದಾರೆ. 2,68,077 ಮತಗಳ ಅಂತರದಿಂದ ತೇಜಸ್ವಿ ಸೂರ್ಯ ಜಯಗಳಿಸಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement