ನವದೆಹಲಿ: ಇಂದು ಭಾನುವಾರ ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಾಜರಾಗಲಿದ್ದಾರೆ. ಖರ್ಗೆ ಅವರು ರಾಜ್ಯಸಭೆಯ ವಿಪಕ್ಷದ ನಾಯಕರಾಗಿ (ಎಲ್‌ಒಪಿ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಇಂಡಿಯಾ ಮೈತ್ರಿಕೂಟದ ಇತರ ಅಂಗಪಕ್ಷಗಳೊಂದಿಗೆ ಮಾತುಕತೆ ನಡೆಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಏತನ್ಮಧ್ಯೆ, ಭಾರತ ರಕ್ಷಾ ಸಮಿತಿ (ಬಿಆರ್‌ಎಸ್) ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಅವರು ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಅಂಗಪಕ್ಷವಾದ ತೃಣಮೂಲ ಕಾಂಗ್ರೆಸ್ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ.
ಬಿಜೆಪಿ ಸ್ವತಂತ್ರವಾಗಿ ಬಹುಮತ ಪಡೆದಿರುವ ಎರಡು ಸಂಪೂರ್ಣ ಅವಧಿಯ ನಂತರ ಸಮ್ಮಿಶ್ರ ಸರ್ಕಾರವನ್ನು ಮುನ್ನಡೆಸುವ ಪ್ರಧಾನಿ ಮೋದಿ ಅವರು ಸತತ ಮೂರನೇ ಅವಧಿಗೆ ಭಾನುವಾರ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಸೀಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್, ಮಾರಿಷಸ್ ಪ್ರಧಾನಿ ಪ್ರವಿಂದಕುಮಾರ , ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ‘ಪ್ರಚಂಡ’, ಭೂತಾನ್ ಪ್ರಧಾನಿ ತ್ಶೆರಿಂಗ್ ತೊಬ್ಗೇ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ