ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಇಂದು, ಮಂಗಳವಾರ ಬೆಳಗ್ಗೆ ಮೈಸೂರಿನ ತೋಟದ ಮನೆಯಲ್ಲಿ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದಲ್ಲಿ ನಡೆದ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದೆ. ಘಟನೆ ಸಂಬಂಧ ರೇಣುಕಾಸ್ವಾಮಿ ಪೋಷಕರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಟ ದರ್ಶನ್‌ ಅವರಿಗೆ ಆತ್ಮೀಯವಾಗಿರುವ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದ. ಇದಲ್ಲದೆ ಕೆಟ್ಟದಾಗಿ ಮೆಸೇಜ್‌ ಮಾಡುತ್ತಿದ್ದ ಎನ್ನಲಾಗಿದೆ.
ಹೀಗಾಗಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಸಲಾಗಿತ್ತು. ಜೂ. 8ರಂದು ರಾತ್ರಿ ಅವರನ್ನು ಶೆಡ್‌ ಒಂದಕ್ಕೆ ಕರೆತಂದು ಬಲವಾಧ ಆಯುಧದಿಂದ ಅವರಿಗೆ ಹೊಡೆದು ಕೊಲೆಗೈದು, ಮೃತದೇಹನ್ನು ಮೋರಿಗೆ ಎಸೆಯಲಾಗಿತ್ತು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಜೂ. 9ರಂದು ಮೋರಿಯಲ್ಲಿ ಬೀದಿ ನಾಯಿಗಳು ಮೃತದೇಹವನ್ನು ಎಳೆಯುತ್ತಿದ್ದನ್ನು ನೋಡಿ, ಪಕ್ಕದಲ್ಲಿದ್ದ ಅಪಾರ್ಟ್‌ ಮೆಂಟ್‌ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪ್ರಮುಖ ಸುದ್ದಿ :-   ವಾಹನಗಳಿಗೆ ಕಣ್ಣುಕುಕ್ಕುವ ಎಲ್‌ಇಡಿ ಲೈಟ್‌ ಹಾಕಿಸಿದ್ದೀರಾ : ಜುಲೈ 1ರಿಂದ ಬೀಳಲಿದೆ ದಂಡ...

ಪೊಲೀಸರಿಗೆ ಮೃತದೇಹ ಸಿಕ್ಕಾಗ ತನಿಖೆ ಶುರುವಾಗಿದೆ. ಈ ಪ್ರಕರಣದಲ್ಲಿ ಮೂವರು ಮೊದಲು ಠಾಣೆಗೆ ಬಂದು ನಾವೇ ಕೊಲೆ ಮಾಡಿದ್ದು, ಹಣಕಾಸಿನ ವಿಚಾರದಲ್ಲಿ ಈ ಕೊಲೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಆದರೆ ಪೊಲೀಸರಿಗೆ ಈ ಬಗ್ಗೆ ಸಂಶಯ ಉಂಟಾಗಿದೆ. ಮತ್ತಷ್ಟು ಆಳವಾಗಿ ತನಿಖೆಗೆ ಇಳಿದು ಅವರನ್ನು ವಿಚಾರಣೆ ಮಾಡಿದ ನಂತರ ಇಬ್ಬರು ಕೊಲೆ ಆರೋಪಿಗಳನ್ನು ಬಂಧಿಸಲಾಗಿತ್ತು. ಅವರ ವಿಚಾರಣೆ ವೇಳೆ ಘಟನೆ ಹಿಂದಿನ ಕಾರಣ ಬೆಳಕಿಗೆ ಬಂದಿದೆ.
ಕೊಲೆ ಮಾಡಿದ ಇಬ್ಬರು ಆರೋಪಿಗಳ ಜೊತೆ ದರ್ಶನ್‌ ನಿರಂತರ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಆರೋಪಿಗಳು ತಪ್ಪೊಪ್ಪಿಗೆ ವೇಳೆ ದರ್ಶನ್‌ ಅವರ ಹೆಸರನ್ನು ಸಹ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಇತರ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.
ಕಾಮಾಕ್ಷಿ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement