ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಆರೋಪಿಗಳು 6 ದಿನ ಪೊಲೀಸ್‌ ಕಸ್ಟಡಿಗೆ

ಬೆಂಗಳೂರು : ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್‌, ಅವರ ಗೆಳತಿ ಪವಿತ್ರ ಗೌಡ ಸೇರಿ 13 ಜನರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಂಗಳವಾರ ಆರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದೆ.
ಎಲ್ಲಾ ಆರೋಪಿಗಳನ್ನು ಕಾಮಾಕ್ಷಿ ಪಾಳ್ಯ ಠಾಣೆಯ ಪೊಲೀಸರು ಬೆಂಗಳೂರಿನ 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಉಸ್ತುವಾರಿಯಾಗಿರುವ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿಶ್ವನಾಥ್‌ ಚನ್ನಬಸಪ್ಪ ಗೌಡರ ಅವರ ಮುಂದೆ ಹಾಜರುಪಡಿಸಿದರು. ಪ್ರಕರಣದ ಮಾಹಿತಿ ಪಡೆದ ಮ್ಯಾಜಿಸ್ಟ್ರೇಟ್‌ ಅವರು ಆರೋಪಿಗಳನ್ನು ಜೂನ್‌ 16ರ ವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿದ್ದಾರೆ.
ಪ್ರಕರಣದಲ್ಲಿ ಪವಿತ್ರಾ ಗೌಡ ಮೊದಲ ಆರೋಪಿಯಾಗಿದ್ದು, ನಟ ದರ್ಶನ್‌ ತೂಗುದೀಪ ಎರಡನೇ ಆರೋಪಿಯಾಗಿದ್ದಾರೆ. ಉಳಿದಂತೆ ಕೆ ಪವನ, ನಂದೀಶ್‌, ಕಾರ್ತಿಕ, ಕೇಶವಮೂರ್ತಿ, ನಿಖಿಲ್‌ ನಾಯ್ಕ್‌, ಎಂ ಲಕ್ಷ್ಮಣ, ದರ್ಶನ್‌ ಅಭಿಮಾನಿ ಸಂಘದ ಚಿತ್ರದುರ್ಗ ಘಟಕದ ಅಧ್ಯಕ್ಷ ರಾಘವೇಂದ್ರ ಅಲಿಯಾಸ್‌ ರಾಘು, ಆರ್‌ ನಾಗರಾಜು, ಎಂ ದೀಪಕ್‌ ಕುಮಾರ್ ಇತರೆ ಆರೋಪಿಗಳಾಗಿದ್ದಾರೆ.

ಕೊಲೆ ಪ್ರಕರಣದ ಹಿನ್ನೆಲೆ..
ದರ್ಶನ್‌ ಗೆಳತಿ ಪವಿತ್ರಾ ಗೌಡಗೆ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪದ ಮೇಲೆ ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಜೂನ್‌ 8ರಂದು ಬೆಂಗಳೂರಿಗೆ ಕರೆಸಿ, ಪಟ್ಟಣಗೆರೆಯ ನಿರ್ಜನ ಪ್ರದೇಶದಲ್ಲಿ ಅವರ ಮೇಲೆ ಹಲ್ಲೆ ಮಾಡಿ ಕೊಲೆಗೈದು ನಂತರ ಶವವನ್ನು ತಡರಾತ್ರಿ ಕಾಮಾಕ್ಷಿ ಪಾಳ್ಯ ಸಮೀಪದ ರಾಜಕಾಲುವೆಯಲ್ಲಿ ಎಸೆಯಲಾಗಿತ್ತು ಎಂದು ಆರೋಪಿಲಾಗಿದೆ.
ಸ್ಥಳೀಯರಿಂದ ಅನಾಥ ಶವದ ಬಗ್ಗೆ ಕಾಮಾಕ್ಷಿ ಪಾಳ್ಯ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ಭೇದಿಸಿ ಇದು ಕೊಲೆ ಪ್ರಕರಣವೆಂದು ಪರಿಗಣಿಸಿದ್ದರು. ಈ ಬಗ್ಗೆ ರೇಣುಕಾಸ್ವಾಮಿ ಅವರು ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಬಂಧಿಸಿದ್ದ ಮೂವರು ಆರೋಪಿಗಳು ಈ ಪ್ರಕರಣದಲ್ಲಿ ನಟ ದರ್ಶನ್‌ ಇರುವ ಬಗ್ಗೆ ಬಾಯ್ಬಿಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿದ್ದ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದರು. ಮಧ್ಯಾಹ್ನದ ವೇಳೆಗೆ ಪವಿತ್ರಾ ಗೌಡರನ್ನು ಬಂಧಿಸಿದ್ದರು. ಸಂಜೆ ವೇಳೆಗೆ ಎಲ್ಲಾ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳ ವಿರುದ್ದ ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 120ಬಿ (ಪಿತೂರಿ) ಮತ್ತು 34ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ ಪ್ರಕರಣ : ಪತ್ನಿ-ಪುತ್ರಿ ವಿರುದ್ಧ ದೂರು ದಾಖಲು, ಪತ್ನಿಯ ಬಂಧನ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement