ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ವಿಸ್ತರಣೆಗೆ ಅನುಮತಿ ನೀಡಿದ ಹೈಕೋರ್ಟ್‌

ಬೆಂಗಳೂರು : ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಆಗಸ್ಟ್‌ ಅಥವಾ ಸೆಪ್ಟೆಂಬರ್‌ವರೆಗೆ ಗಡುವು ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಬುಧವಾರ ಅನುಮತಿಸಿದೆ.
ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ವಿಧಿಸಲಾಗಿರುವ ಗಡುವು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಎಚ್‌ಎಸ್‌ಆರ್‌ಪಿ ಅಳವಡಿಸದಿರುವುದಕ್ಕೆ ಅರ್ಜಿದಾರರ ವಿರುದ್ಧ ಜೂನ್ 12ರವರೆಗೆ ಹೆಚ್‌ಎಸ್‌ಆರ್‌ಪಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮಗಳು ಅಥವಾ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್‌ನ ರಜಾಕಾಲೀನ ಪೀಠವು ಮೇ 21ರಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಈಗ ರಾಜ್ಯ ಸರ್ಕಾರವು ಆಗಸ್ಟ್‌-ಸೆಪ್ಟೆಂಬರ್‌ವರೆಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಹೀಗಾಗಿ, ಮೇ 21ರ ಆದೇಶದಲ್ಲಿ ಮಾರ್ಪಾಡು ಮಾಡಲಾಗಿದೆ” ಎಂದು ನ್ಯಾಯಾಲಯದ ಆದೇಶ ಹೇಳಿದೆ.

ಇದಕ್ಕೂ ಮುನ್ನ, ಅರ್ಜಿದಾರರ ಪರ ಹಿರಿಯ ವಕೀಲರಾದ ಆದಿತ್ಯ ಸೋಂಧಿ ಅವರು “ಹೈಕೋರ್ಟ್‌ ಅರ್ಜಿದಾರರ ವಿರುದ್ಧ ದುರುದ್ದೇಶಿತ ಕ್ರಮಕೈಗೊಳ್ಳದಂತೆ ಮಾಡಿರುವ ಆದೇಶವು ಬುಧವಾರಕ್ಕೆ ಮುಕ್ತಾಯವಾಗಲಿದೆ” ಎಂದು ತಿಳಿಸಿದರು.
ಆಗ ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಮ್‌ ಹುಯಿಲಗೋಳ ಅವರು “ಸರ್ಕಾರವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ವಿಧಿಸಿರುವ ಗಡುವನ್ನು ಆಗಸ್ಟ್‌ ಅಥವಾ ಸೆಪ್ಟೆಂಬರ್‌ವರೆಗೆ ವಿಸ್ತರಿಸಲು ನಿರ್ಧರಿಸಿದೆ. ಆದರೆ, ರಜಾಕಾಲೀನ ಪೀಠವು ಮೇ 21ರಂದು ದುರುದ್ದೇಶಪೂರಿತ ಕ್ರಮಕೈಗೊಳ್ಳಬಾರದು ಎಂದು ಆದೇಶಿಸಿದೆ. ಹೀಗಾಗಿ, ಗಡುವು ವಿಸ್ತರಿಸಿ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿಲ್ಲ. ಆದ್ದರಿಂದ, ಮೇ 21ರ ಆದೇಶದಲ್ಲಿ ಮಾರ್ಪಾಡು ಮಾಡಬೇಕು. ಪೀಠ ಅನುಮತಿಸಿದರೆ ಗಡುವು ವಿಸ್ತರಿಸಿ ಅಧಿಸೂಚನೆ ಹೊರಡಿಸಲಾಗುವುದು” ಎಂದರು.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ಇದಕ್ಕೆ ಸಮ್ಮತಿಸಿದ ಪೀಠವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ವಿಧಿಸಿದ್ದ ಗಡುವು ವಿಸ್ತರಿಸಲು ಅನುಮತಿಸಿ, ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿತು. ಇದೀಗ ಹೈಕೋರ್ಟ್​ ಮಧ್ಯಂತರ ಆದೇಶ ಜುಲೈ 4 ರವರೆಗೆ ವಿಸ್ತರಣೆಯಾಗಿದ್ದು, ಅಲ್ಲಿಯ ವರೆಗೆ ಹೆಚ್‌ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಜತೆಗೆ, ರಾಜ್ಯ ಸರ್ಕಾರವು ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ವಿಸ್ತರಿಸಲು ಕೋರ್ಟ್ ಅನುವು ಮಾಡಿಕೊಟ್ಟಿದೆ. ಹೀಗಾಗಿ ಇದೀಗ ಸರ್ಕಾರ ಅವಧಿ ವಿಸ್ತರಣೆ ಮಾಡಿ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement