ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ, ಪವಿತ್ರ ಗೌಡ ಸೇರಿ ಆರೋಪಿಗಳಿಗೆ ಮತ್ತೆ ಪೊಲೀಸ್‌ ಕಸ್ಟಡಿ

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್‌, ಅವರ ಗೆಳತಿ ಪವಿತ್ರ ಗೌಡ ಸೇರಿ 10 ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಶನಿವಾರ ಮತ್ತೆ ಐದು ದಿನಗಳ ಕಾಲ (ಜೂನ್‌ 20ರವರೆಗೆ) ಪೊಲೀಸ್‌ ಕಸ್ಟಡಿಗೆ ನೀಡಿದೆ.
ದರ್ಶನ್‌ ಸೇರಿ ಎಲ್ಲಾ ಆರೋಪಿಗಳನ್ನು ಕಾಮಾಕ್ಷಿ ಪಾಳ್ಯ ಠಾಣೆಯ ಪೊಲೀಸರು ಬೆಂಗಳೂರಿನ 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಉಸ್ತುವಾರಿಯಾಗಿರುವ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿಶ್ವನಾಥ ಚನ್ನಬಸಪ್ಪ ಗೌಡರ ಅವರ ಮುಂದೆ ಹಾಜರುಪಡಿಸಿದರು.
ವಾದ ಆಲಿಸಿದ ನ್ಯಾಯಾಲಯವು ಪವಿತ್ರ ಗೌಡ, ನಟ ದರ್ಶನ್‌ ಸೇರಿದಂತೆ ಒಟ್ಟು 10 ಮಂದಿಯನ್ನು ಜೂನ್‌ 20ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿದೆ.

ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಕವಾಗಿರುವ ಪಿ ಪ್ರಸನ್ನಕುಮಾರ ಅವರು “ರೇಣುಕಾಸ್ವಾಮಿ ಅವರ ಶವದ ಗುರುತು ಸಿಗದಂತೆ ಮಾಡಲು 30 ಲಕ್ಷ ರೂಪಾಯಿ ಆಮಿಷ ಒಡ್ಡಲಾಗಿತ್ತು. ಇದನ್ನು ವಶಪಡಿಸಿಕೊಳ್ಳಲಾಗಿದೆ. 10 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಸಿ ಡಿ ಯನ್ನು ನ್ಯಾಯಾಲಯ ಪರಿಶೀಲಿಸಬಹುದಾಗಿದೆ. 5 ಮತ್ತು 13ನೇ ಆರೋಪಿಗಳು ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್‌ ನೀಡಿದ್ದಾರೆ. ಇದಕ್ಕೆ ಬಳಕೆ ಮಾಡಿರುವ ವಸ್ತುವನ್ನು ವಶಪಡಿಸಿಕೊಳ್ಳಬೇಕಿದೆ. ಇನ್ನೂ ಹೆಚ್ಚಿನ ತನಿಖೆ ನಡೆಸುವ ಅಗತ್ಯ ಇರುವುದರಿಂದ 9 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂದು ಕೋರಿದರು. ದರ್ಶನ್‌ ಪರವಾಗಿ ವಕೀಲ ಅನಿಲಬಾಬು ವಕಾಲತ್ತು ಹಾಕಿದ್ದು, ಪೊಲೀಸ್‌ ಕಸ್ಟಡಿಗೆ ನೀಡುವುದಕ್ಕೆ ಆಕ್ಷೇಪಿಸಿದರು.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ಪ್ರಕರಣದ ಹಿನ್ನೆಲೆ: ದರ್ಶನ್‌ ಗೆಳತಿ ಪವಿತ್ರ ಗೌಡಗೆ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪದ ಮೇಲೆ ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಜೂನ್‌ 8ರಂದು ಬೆಂಗಳೂರಿಗೆ ಕರೆಸಿ, ಪಟ್ಟಣಗೆರೆಯ ವಾಹನಗಳನ್ನು ನಿಲ್ಲಿಸುವ ಖಾಸಗಿ ಶೆಡ್‌ ಒಂದರಲ್ಲಿ ಅವರ ಮೇಲೆ ಹಲ್ಲೆ ಮಾಡಿ ಕೊಲೆಗೈದಿರುವ ಆರೋಪ ದರ್ಶನ್‌ ಮತ್ತು ಸಹಚರರ ಮೇಲಿದೆ. ಆನಂತರ ಶವವನ್ನು ತಡರಾತ್ರಿ ಕಾಮಾಕ್ಷಿ ಪಾಳ್ಯ ಸಮೀಪದ ರಾಜಕಾಲುವೆಯಲ್ಲಿ ಎಸೆಯಲಾಗಿತ್ತು ಎಂದು ಆರೋಪಿಲಾಗಿದೆ. ಆರೋಪಿಗಳ ವಿರುದ್ದ ಐಪಿಸಿ ಸೆಕ್ಷನ್‌ಗಳಾದ 302 (ಕೊಲೆ), 201, 120ಬಿ (ಪಿತೂರಿ) ಮತ್ತು 34ರ ಅಡಿ ಪ್ರಕರಣ ದಾಖಲಿಸಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement