ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಜೆಡಿಎಸ್ ಕಾರ್ಯಕರ್ತನೆನ್ನಲಾದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣದಲ್ಲಿ ವಿಧಾನ ಪರಿಷತ್‌ ಸದಸ್ಯ ಡಾ. ಸೂರಜ್‌ ರೇವಣ್ಣ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಭಾನುವಾರ ಬೆಳಿಗ್ಗೆ ಹಾಸನದಲ್ಲಿ ಬಂಧಿತರಾದ ಶಾಸಕ ರೇವಣ್ಣ ಅವರ ಪುತ್ರ ಸೂರಜ್‌ ರೇವಣ್ಣ ಅವರನ್ನು ಸಂಜೆ ಸಿಐಡಿ ಪೊಲೀಸರು ಬೆಂಗಳೂರಿನ ಕೋರಮಂಲಗದ ನ್ಯಾಷನಲ್‌ ಗೇಮ್ಸ್‌ ವಿಲೇಜ್‌ನಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದರು.
ಅಧಿಕೃತವಾಗಿ ಸಿಐಡಿ ವಿಚಾರಣೆಯನ್ನ ಕೈಗೆತ್ತಿಕೊಂಡಿರದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಶಿವಕುಮಾರ ಅವರು ನ್ಯಾಯಾಂಗ ಬಂಧನ ಆದೇಶ ನೀಡಿದರು. ಅಧಿಕೃತವಾಗಿ ತನಿಖೆ ಕೈಗೆತ್ತಿಕೊಂಡ ಬಳಿಕ ಸೂರಜ್ ಅವರನ್ನ ಸಿಐಡಿ ತನ್ನ ವಶಕ್ಕೆ ಕೋರಲಿದೆ.

ಶನಿವಾರ ಸಂಜೆ ಹಾಸನದ ಸೈಬರ್ ಠಾಣೆಯಲ್ಲಿ ಸೂರಜ್ ಅವರನ್ನು ವಿಚಾರಣೆ ನಡೆಸಿದ್ದ ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದರು. ಯುವಕ ಸಲ್ಲಿಸಿದ್ದ ದೂರು ಆಧರಿಸಿ ಸೂರಜ್‌ ಅವರ ವಿರುದ್ಧ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 377 (ಅನೈಸರ್ಗಿಕ ಅಪರಾಧ), 342 (ಅಕ್ರಮ ಬಂಧನಕ್ಕಾಗಿ ದಂಡನೆ), 506 (ಬೆದರಿಕೆ), 34 (ಏಕೋದ್ದೇಶಕ್ಕಾಗಿ ವಿವಿಧ ವ್ಯಕ್ತಿಗಳು ಎಸಗಿದ ಕೃತ್ಯ) ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ.
ಚನ್ನರಾಯಪಟ್ಟಣ ತಾಲೂಕಿನ ಗನ್ನಿಗಡ ತೋಟದ ಮನೆಯಲ್ಲಿ ತನ್ನೊಂದಿಗೆ ಸೂರಜ್‌ ರೇವಣ್ಣ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವಕ ಪೊಲೀಸ್‌ ಮಹಾ ನಿರ್ದೇಶಕರು ಹಾಗೂ ಗೃಹ ಸಚಿವರಿಗೆ ದೂರು ನೀಡಿದ್ದರು. ಹನುಮನಹಳ್ಳಿ ಗ್ರಾಮದ ಶಿವಕುಮಾರ ಮತ್ತು ಸೂರಜ್ ರೇವಣ್ಣ ಅವರಿಂದ ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದಾರೆ. ಶನಿವಾರ ದೂರುದಾರನಿಂದ ಹೇಳಿಕೆ ಪಡೆದು ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿತ್ತು. ಭಾನುವಾರ ಸೂರಜ್‌ ಅವರ ಬಂಧನವಾದ ಕೆಲ ಗಂಟೆಗಳ ಬಳಿಕ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement