
ಬೆಂಗಳೂರು : ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲ್ಲೂಕು ಪಂಚಾಯತ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಹೈಕೋರ್ಟ್‌ಗೆ ಸೋಮವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.
ಆಯೋಗದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಲು ಸಲ್ಪ ಕಾಲಾವಕಾಶ ನೀಡುವಂತೆ ಸರ್ಕಾರಿ ವಕೀಲರು ಮಾಡಿದ ಮನವಿ ಪುರಸ್ಕರಿಸಿದ ಪೀಠವು ಅರ್ಜಿ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ.

ಇದಕ್ಕೂ ಮೊದಲು, ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರು “ಈ ಹಿಂದೆ ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಪಂ ಮತ್ತು ತಾಪಂ ಚುನಾವಣೆಗೆ ಮೀಸಲಾತಿ ಅಂತಿಮಗೊಳಿಸಿಲ್ಲ. ಇದರಿಂದ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ” ಎಂದು ತಿಳಿಸಿದರು.
ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, “ಈ ವಿಚಾರವಾಗಿ ರಾಜ್ಯ ಅಡ್ವೋಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಆ ಮನವಿಯನ್ನು ಪೀಠವು ಪರಿಗಣಿಸಿ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿತು.


ನಿಮ್ಮ ಕಾಮೆಂಟ್ ಬರೆಯಿರಿ