ಸನಾತನ ಧರ್ಮ ನಿರ್ಮೂಲನೆ ಹೇಳಿಕೆ : ಉದಯನಿಧಿ ಸ್ಟಾಲಿನ್‌ ಗೆ ಜಾಮೀನು

ಬೆಂಗಳೂರು : ಸನಾತನ ಧರ್ಮ ಕುರಿತು ವಿವಾದಾತಕ ಹೇಳಿಕೆ ನೀಡಿದ ಆರೋಪದಲ್ಲಿ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.
ಸಾಮಾಜಿಕ ಕಾರ್ಯಕರ್ತ ಪರಮೇಶ್ವರ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಉದಯನಿಧಿ ಸ್ಟಾಲಿನ್‌ ಮಂಗಳವಾರ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿತು. ಕಳೆದ ವರ್ಷ ಸೆಪ್ಟೆಂಬರ್ 4 ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸಮಾವೇಶವೊಂದರಲ್ಲಿ ಪಾಲ್ಗೊಂಡು ಮಾತನಾಡಿದ್ದ ಉದಯನಿಧಿ, ಸನಾತನ ಧರ್ಮ ಡೆಂಘಿ, ಮಲೇರಿಯಾ ಹಾಗೂ ಕೊರೋನಾ ಇದ್ದಂತೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಅದು ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪರಮೇಶ್ವರ ಎಂಬುವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಖುದ್ದು ಹಾಜರಾತಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ಹೀಗಾಗಿ ಮಂಗಳವಾರ ಖುದ್ದಿ ಹಾಜರಾದರು. ಉದಯನಿಧಿ ಅವರ ಹಾಜರಾತಿ ದಾಖಲಿಸಿಕೊಂಡ ಮ್ಯಾಜಿಸ್ಟ್ರೇಟ್‌, ₹ 5 ಸಾವಿರ ನಗದು ಹಾಗೂ ₹ 50 ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ಮೇರೆಗೆ ಜಾಮೀನು ನೀಡಿದರು. ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ.
ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಹಾಗೂ ವಿಚಾರಣೆಯನ್ನು ಮುಂದೂಡುವಂತೆ ಅವರ ಪರ ವಕೀಲರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿದ್ದ ನ್ಯಾಯಾಲಯ ಆಗಸ್ಟ್ 8 ಕ್ಕೆ ವಿಚಾರಣೆಯನ್ನು ಮುಂದೂಡಿತು.
ಇದೇ ಪ್ರಕರಣದಲ್ಲಿ ಕಾರ್ಯಕ್ರಮದ ಸಂಘಟಕರಾದ ಎಸ್‌ ವೆಂಕಟೇಶ, ಎಂ ರಾಮಲಿಂಗಂ ಮತ್ತು ಅದವನ್‌ ದಿಚನ್ಯ ವಿರುದ್ಧದ ನ್ಯಾಯಿಕ ಪ್ರಕ್ರಿಯೆಗಳಿಗೆ ಕರ್ನಾಟಕ ಹೈಕೋರ್ಟ್ ಈಚೆಗೆ ತಡೆ ನೀಡಿದೆ.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement