ಮಂಗಳೂರು : ಪಕ್ಕದ ಕಂಪೌಂಡ್ ಗೋಡೆ ಮನೆ ಮೇಲೆ ಬಿದ್ದು ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವಿಗೀಡಾದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ರಿಹಾನ ಮಂಝಿಲ್ ಮನೆಯ ಯಾಸಿರ್ (45), ಪತ್ನಿ ಮರಿಯಮ್ಮ(40), ಪುತ್ರಿಯರಾದ ರಿಹಾನಾ (11)ಮತ್ತು ರಿಫಾನ (17) ಮೃತರು ಎಂದು ಗೊತ್ತಾಗಿದೆ. ಮಳೆಯಿಂದಾಗಿ ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ ಕುಸಿದು ಈ ದುರಂತ ಸಂಭವಿಸಿದೆ.
ಮಂಗಳೂರಿನ ಬಂದರಿನಲ್ಲಿ ಮಡ್ಡಿ ಆಯಿಲ್ ಕಾರ್ಯನಿರ್ವಹಿಸುತ್ತಿದ್ದ ಯಾಸಿರ್ ಕುಟುಂಬ ರಾತ್ರಿ ಊಟ ಮುಗಿಸಿ ಮನೆಯ ಕೋಣೆಯಲ್ಲಿ ಮಲಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ರಾತ್ರಿಯಿಡೀ ಮಳೆ ಸುರಿದ ಪರಿಣಾಮ ಪರಿಣಾಮ ಕಂಪೌಂಡ್ ಗೋಡೆ ಹಾಗೂ ಎರಡು ಅಡಕೆ ಮರಗಳು ಯಾಸಿರ್ ಅವರ ಮನೆ ಮೇಲೆ ಉರುಳಿಬಿದ್ದಿವೆ. ದೊಡ್ಡ ಮಗಳು ರಶೀನಾ ಕೇರಳ ಕಡೆಗೆ ವಿವಾಹ ಮಾಡಿಕೊಡಲಾಗಿದ್ದು, ಬಕ್ರೀದ್ ಗೆಂದು ಬಂದವರು ನಿನ್ನೆಯಷ್ಟೇ ಗಂಡನ ಮನೆಗೆ ವಾಪಸ್ಸಾಗಿದ್ದರು ಎಂದು ಹೇಳಲಾಗಿದೆ.
ಆರು ವರ್ಷಗಳ ಹಿಂದೆ ಮನೆ ಖರೀದಿಸಿದ್ದ ಇವರು ಒಂದು ವರ್ಷ ಮನೆಯನ್ನು ಲೀಸ್ ಗೆ ನೀಡಿ ಆರು ತಿಂಗಳ ಹಿಂದಷ್ಟೇ ಮನೆಗೆ ವಾಪಸ್ಸಾಗಿದ್ದರು. ಎರಡು ವರ್ಷಗಳ ಹಿಂದೆಯೂ ಮನೆ ಮೇಲೆ ಇದೇ ರೀತಿ ಕಂಪೌಂಡ್ ಕುಸಿದಿತ್ತು, ಆಗ ಯಾವುದೇ ಪ್ರಾಣಾಪಾಯವಾಗಿರಲಿಲ್ಲ ಎನ್ನಲಾಗಿದೆ.
ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ