ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ನಿಂತಿದ್ದ ಲಾರಿಗೆ ಟೆಂಪೊ ಟ್ರಾವೆಲರ್ (ಟಿಟಿ) ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳು ಮಹಿಳೆಯರು, ಒಂದು ಮಗು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಟಿಟಿ ವಾಹನದಲ್ಲಿ 15ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು.ಡಿಕ್ಕಿ ಹೊಡೆದ ರಭಸಕ್ಕೆ ಟಿಟಿ ವಾಹನದಲ್ಲಿದ್ದವರ ಪೈಕಿ 11 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಾಗೇಶ (50 ವರ್ಷ), ವಿಶಾಲಾಕ್ಷಿ (40), ಪರಶುರಾಮ (45), ಭಾಗ್ಯ (40), ಸುಭದ್ರಾಬಾಯಿ (65), ಪುಣ್ಯ (50 ) ಮಂಜುಳಾ (62), ಚಾಲಕ ಆದರ್ಶ (23), ಮಾನಸ (24), ರೂಪಾ (40), ಮಂಜುಳಾ (50) ಮೃತಪಟ್ಟವರು ಎಂದು ಹೇಳಲಾಗಿದೆ. ಮಕ್ಕL ಹೆಸರು ತಿಳಿದು ಬರಬೇಕಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬಳಿಯ ಎಮ್ಮೆ ಹಟ್ಟಿ ಗ್ರಾಮದವರು ಎನ್ನಲಾಗಿದ್ದು, ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಿ ದರ್ಶನ ಮುಗಿಸಿಕೊಂಡ ನಂತರ ಎಲ್ಲಮ್ಮನಗುಡ್ಡ ದೇವರ ದರ್ಶನ ಮುಗಿಸಿಕೊಂಡು ಊರಿಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಶುಕ್ರವಾರ ಬೆಳಗಿನ ಜಾವ ನಾಲ್ಕೂವರೆ ಗಂಟೆಗೆ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಂಶುಕುಮಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ