
ಮೈಸೂರು: ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.
ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮಾಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣ ಬೆಳಕಿಗೆ ತಂದವರು ಎಂದು ಹೇಳಲಾದ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರನ್ನು ದಿಢೀರನೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
21 ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಲಾಗಿದ್ದು, ಆ ಪಟ್ಟಿಯಲ್ಲಿ ಕೆ.ವಿ. ರಾಜೇಂದ್ರ ಅವರೂ ಇದ್ದಾರೆ. ವಿಶೇಷವೆಂದರೆ ಅವರು ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಎರಡು ವರ್ಷವೂ ಆಗಿರಲಿಲ್ಲ. ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಮುಡಾ ಹಗರಣ ಸಂಚಲನ ಮಾಡುತ್ತಿರುವ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಡಾ.ಕೆ.ವಿ.ರಾಜೇಂದ್ರ ಅವರನ್ನು ವರ್ಗಾವಣೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಕೆ.ವಿ. ರಾಜೇಂದ್ರ ಅವರು, 2022ರ ಅಕ್ಟೋಬರ್ ನಲ್ಲಿ ಮೈಸೂರಿನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಸೈಟುಗಳನ್ನು ಹಂಚಿಕೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿಬಂದಿವೆ. ಭೂ ಮಾಲೀಕರಿಂದ ಭೂಮಿ ಪಡೆದು ಬಡಾವಣೆಗಳನ್ನು ಮಾಡಿ, ಶೇ. 50-50 ಅನುಪಾತದಲ್ಲಿ ಭೂ ಮಾಲೀಕರಿಗೆ ಸೈಟು ಹಂಚಲಾಗಿರುವ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಮುಡಾ ಲೇಔಟ್ ಯೋಜನೆಗಳಲ್ಲಿ ಆಗಿರಬಹುದಾದ ಅಕ್ರಮಗಳ ಬಗ್ಗೆ ಡಜಿಲ್ಲಾಧಿಕಾರಿಯಾಗಿದ್ದ ರಾಜೇಂದ್ರ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದು ವಿವರಣೆ ಕೋರಿದ್ದರು.
ಮುಡಾಕ್ಕೆ ಅಧ್ಯಕ್ಷರನ್ನು ನೇಮಿಸುವವರೆಗೆ ಅವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಆಗ ಪ್ರಾಧಿಕಾರದಲ್ಲಿ ಕಾನೂನು ಬಾಹಿರವಾಗಿ ಆಸ್ತಿಗಳನ್ನು ಹಂಚಿಕೆ ಮಾಡುತ್ತಿರುವ ಬಗ್ಗೆ ಕೇಳಿಬಂದ ಆರೋಪಗಳನ್ನೂ ಪರಾಮರ್ಶಿಸಲು ಮತ್ತು ಕ್ರಮ ಕೈಗೊಳ್ಳಲು ಸರ್ಕಾರದ ಹಂತದಲ್ಲಿ ಉನ್ನತ ಮಟ್ಟದ ತನಿಖಾ ತಂಡವನ್ನು ರಚಿಸಬೇಕು ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಅಲ್ಲದೇ, ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆದು ಕ್ರಮಕ್ಕೆ ಶಿಫಾರಸು ಮಾಡಿದ್ದರು. ಈಗ ಅವರನ್ನು ದಿಢೀರ್ ವರ್ಗಾವಣೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ರಾಜೇಂದ್ರ ಅವರನ್ನು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ನಿಯುಕ್ತಿಗೊಳಿಸಲಾಗಿದ್ದು, ಅವರ ಜಾಗಕ್ಕೆ ಮೈಸೂರಿನ ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ ರೆಡ್ಡಿಯವನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ