ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿತ ಪ್ರಕರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖ ಕಲ್ಲಡ್ಕ ಡಾ.ಪ್ರಭಾಕರ ಭಟ್‌ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ನ್ಯಾಯಾಲಯದಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಕಲ್ಲಡ್ಕ ಪ್ರಭಾಕರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಪ್ರಭಾಕರ ಭಟ್ ಪರ ಹಿರಿಯ ವಕೀಲ ಎಂ‌ ಅರುಣ ಶ್ಯಾಮ ವಾದಿಸಿದರು.
2023ರ ಡಿಸೆಂಬರ್ 24ರ ಮಧ್ಯಾಹ್ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿನ ಸಾರ್ವಜನಿಕ ವೇದಿಕೆಯಲ್ಲಿ ಡಾ.ಪ್ರಭಾಕರ ಭಟ್ ಮಾತನಾಡಿದ್ದು ವಿವಾದಕ್ಕೆ ಕಾರಣವಾಗಿತ್ತು.

“ಮುಸ್ಲಿಂ‌ ಮಹಿಳೆಯರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ ಎಂದು ಹೇಳಿದ್ದಾರೆ. ಈ ಹೇಳಿಕೆಯು ಮಹಿಳೆಯರ ಖಾಸಗಿತ‌ನ, ಮಹಿಳೆಯನ್ನು ಲೈಂಗಿಕವಾಗಿ ನಿಂದಿಸುವ, ಮಹಿಳೆಯರ ಖಾಸಗಿ ವಿಷಯಗಳನ್ನು ಅಶ್ಲೀಲಗೊಳಿಸುವಿಕೆ, ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ, ಸಾರ್ವಜನಿಕವಾಗಿ ಮಹಿಳೆಯರನ್ನು ಚುಡಾಯಿಸಿದ, ಮಹಿಳೆಯರ ಘನತೆಗೆ ಅಡ್ಡಿ ಉಂಟು ಮಾಡಿದ ಅಪರಾಧ” ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಬಿನ್ ನಜೀರ್ ಅಹ್ಮದ್ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ 2023ರ ಡಿಸೆಂಬರ್ 26ರಂದು ದೂರು ನೀಡಿದ್ದರು.
ದೂರಿನ ಅನ್ವಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು ಶ್ರೀರಂಗಪಟ್ಟಣ ಜೆಎಂಎಫ್‌ಸಿ ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ ನೇಮಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement