ಕೊಪ್ಪಳ : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬೇಕಾಗುತ್ತದೆ. ಇದರಿಂದ ಬೇರೆ ಯೋಜನೆಗಳಿಗೆ ಅನುದಾನದ ಕೊರತೆಯಾಗುತ್ತಿದೆ. ಮುಖ್ಯಮಂತ್ರಿಗಳ ಜೊತೆಗೆ ಇರುವ ನನಗೆ ಮಾತ್ರ ಒಳಗಿನ ಸಮಸ್ಯೆ ಏನು ಎಂಬುದು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಕೊಪ್ಪಳದ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ಕೆರೆ ತುಂಬಿಸುವ ಯೋಜನೆಗೆ ಕೆರೆ ನಿರ್ಮಾಣಕ್ಕೆ ಭೂಮಿ ಪಡೆಯಲು ಗುರುವಾರ (ಜುಲೈ 11) ಆಯೋಜಿಸಿದ್ದ ರೈತರು ಮತ್ತು ಗ್ರಾಮಸ್ಥರ ಸಭೆಯಲ್ಲಿ ಅವರು ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆಗೆ (Guarantee Scheme) 60 ರಿಂದ 65 ಸಾವಿರ ಕೋಟಿ ಹಣ ಬೇಕು. ಹೀಗಾಗಿ ಉಳಿದ ಅಭಿವೃದ್ಧಿ ಕಾರ್ಯಕ್ಕೆ ಹಣಕಾಸಿನ ಕೊರತೆ ಎದುರಾಗುತ್ತಿದೆ. ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗುತ್ತಿಲ್ಲ. ನಾನು ಸಿಎಂ ಆರ್ಥಿಕ ಸಲಹೆಗಾರ ಆಗಿರುವುದಿರಂದ ಪ್ರತಿದಿನ ಅವರ ಜೊತೆ ಇರುವುದರಿಂದ ಸಮಸ್ಯೆ ಏನು ಎಂಬುದು ಗೊತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ನಾನು ಕೆರೆ ತುಂಬಿಸುವ ಯೋಜನೆಗೆ ಬರೋಬ್ಬರಿ 970 ಕೋಟಿ ರೂ. ಅನುದಾನ ತಂದಿದ್ದೇನೆ. ರಾಜ್ಯದ ಯಾವುದೇ ವಿಧಾನಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗುತ್ತಿಲ್ಲ. ತುಂಬಾ ಕ್ಷೇತ್ರದ ಶಾಸಕರು ಅಭಿವೃದ್ಧಿಗೆ ಅನುದಾನ ಕೇಳುತ್ತಿದ್ದಾರೆ. ಆದರೆ, ಹೊಂದಿಸಲು ಕಷ್ಟವಾಗುತ್ತಿದೆ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ