ಶಿರೂರು ಗುಡ್ಡ ಕುಸಿತ ದುರಂತ | ಐ ಆರ್ ಬಿ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ; ಉಸ್ತುವಾರಿ ಸಚಿವರ ಸೂಚನೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಕುರಿತಂತೆ ಐ ಆರ್ ಬಿ ಕಂಪನಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಈ ಸೂಚನೆ ನೀಡಿದ್ದಾರೆ. ಅಂಕೋಲಾ ತಾಲೂಕಿನ ಶಿರೂರುನಲ್ಲಿ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಸಚಿವರು ಈ ಘಟನೆಗೆ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಪ್ರಮುಖ ಕಾರಣವಾಗಿದ್ದು ಮೃತರ ಸಾವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಐಆರ್‌ಬಿ ಕಂಪನಿಯ ಅಧಿಕಾರಿಗಳ ವಿರುದ್ಧ ಪೊಲೀಸ್ ಪ್ರಕರಣ ಮತ್ತು ಗುಡ್ಡ ಕುಸಿತಕ್ಕೆ ಕಾರಣವಾಗಿದ್ದರಿಂದ ಅರಣ್ಯ ಇಲಾಖೆಯ ಕಾಯ್ದೆ ಯಡಿ ಎಫ್ಐಆರ್ ದಾಖಲಿಸುವಂತೆ ಸೂಚನೆ ನೀಡಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ  ಸಾವಿರಾರು ಮಂದಿ ಅಪಘಾತಗಳಿಂದ ಮೃತಪಟ್ಟಿದ್ದು ಇದಕ್ಕೆಲ್ಲ ಅಧಿಕಾರಿಗಳ ಬೇಜಾವಬ್ದಾರಿಯೇ ಕಾರಣ ಎಂದರು. ರಸ್ತೆ ಕಾಮಗಾರಿಯನ್ನು ಯಾವಾಗ ಮುಕ್ತಾಯಗೊಳಿಸುತ್ತೀರಿ ಎಂಬ ಪ್ರಶ್ನೆಗೆ ಐಆರ್‌ಬಿ ಅಧಿಕಾರಿಗಳು ಸೂಕ್ತ ಉತ್ತರ ನೀಡಲಿಲ್ಲ, ಇದರಿಂದ ತೀವ್ರ ಅಸಮಾಧಾನ ಗೊಂಡ ಸಚಿವರು, ಸ್ಪಷ್ಟ ಉತ್ತರ ನೀಡುವವರೆಗೆ ಜಿಲ್ಲಾಡಳಿತದಿಂದ ಯಾವುದೇ ಸಹಕಾರ ನೀಡಬಾರದು ಎಂದು ಸೂಚಿಸಿದರು.
ಮಳೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲು ವಿಳಂಬ ಮಾಡಬೇಡಿ, ಕಾಳಜಿ ಕೇಂದ್ರದಲ್ಲಿ ಯಾವುದೇ ಕೊರತೆಯಾಗದಂತೆ ಎಲ್ಲಾ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಎಂದು ಸೂಚನೆ ನೀಡಿದರು.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ಮಳೆಯಿಂದಾಗಿ ಹಾನಿಯಾದ ಮನೆಗಳಿಗೆ ಮಾನವೀಯ ನೆಲೆಯಲ್ಲಿ ಗರಿಷ್ಠ ಪರಿಹಾರ ಮಂಜೂರು ಮಂಜೂರು ಮಾಡುವಂತೆ ಸೂಚಿಸಿದ ಅವರು, ಎಲ್ಲ ತಾಲುಕುಗಳಿಗೆ ಕಾಳಜಿ ಕೇಂದ್ರ ತೆರೆಯಲು ಅನುದಾನದ ಕೊರತೆ ಯಾಗದಂತೆ ಎಚ್ಚರ ವಹಿಸಬೇಕು ಎಂದರು.
ಅಣಶಿಯಲ್ಲಿ ಸುರಕ್ಷಿತ ಸಂಚಾರಕ್ಕಾಗಿ ರಸ್ತೆ ಅಗಲೀಕರಣ ಕೈಗೊಳ್ಳಲು ಲೋಕೋಪಯೋಗಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಯೋಜನೆ ರೂಪಿಸಿ, ಜಾರಿಗೊಳಿಸುವಂತೆ ಶಾಸಕ ಸತೀಶ್ ಸೈಲ್ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ ಕಾಂದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಹಾಗೂ ರಾಷ್ಟ್ರೀಯ ಹೆದ್ದಾರಿ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement